AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಮಾರ್ಚ್ 25ರಂದು ಮತ್ತೆ ರಾಜ್ಯಕ್ಕೆ ಮೋದಿ; ದಾವಣಗೆರೆಯಲ್ಲಿ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯಕ್ಕೆ ಪದೇ ಪದೇ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವಾದ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

Narendra Modi: ಮಾರ್ಚ್ 25ರಂದು ಮತ್ತೆ ರಾಜ್ಯಕ್ಕೆ ಮೋದಿ; ದಾವಣಗೆರೆಯಲ್ಲಿ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Ganapathi Sharma
|

Updated on: Mar 11, 2023 | 7:17 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯಕ್ಕೆ ಪದೇ ಪದೇ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾರ್ಚ್ 25ರಂದು ದಾವಣಗೆರೆಗೆ (Davanagere) ಭೇಟಿ ನೀಡಲಿದ್ದಾರೆ. ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವಾದ ವಿಜಯಸಂಕಲ್ಪ ಯಾತ್ರೆಯ (Vijay Sankalpa Yatra) ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ಸಮಾರೋಪ ಸಮಾರಂಭ ನಡೆಯಲಿದೆ. ಒಟ್ಟಾರೆಯಾಗಿ ಸುಮಾರು 400 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 10 ಲಕ್ಷ ಜನ ಸೇರಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಸಮಾವೇಶಕ್ಕೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದ್ದು, 30ಕ್ಕೂ ಹೆಚ್ಚು ಜೆಸಿಬಿಗಳಿಂದ ಸಮಾವೇಶ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್​​ನ ಸಿದ್ದರಾಮೋತ್ಸವಕ್ಕೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲಿದೆ ಎನ್ನಲಾಗಿದೆ.

ಈ ಮಧ್ಯೆ, ಪಾಲಿಕೆ ಇಂಜಿನಿಯರ್​ಗಳನ್ನು ಬಿಜೆಪಿ ಸಮಾವೇಶದ ಸಿದ್ಧತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದು ಬಿಜೆಪಿ‌ ಕಾರ್ಯಕ್ರಮವೇ ಅಥವಾ ಸರ್ಕಾರಿ ಕಾರ್ಯಕ್ರಮವೇ ಎಂದು ಪ್ರಶ್ನಿಸಿವೆ.

ಇದನ್ನೂ ಓದಿ: Karnataka Assembly Election: ಅಂಗವಿಕಲರು, 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಕಾರ್ಯಕ್ರಮದ ಬೆನ್ನಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಚುನಾವಣಾ ಆಯೋಗದ ನಿಯೋಗ ಈಗಾಗಲೇ ರಾಜ್ಯ ಭೇಟಿ ಮುಕ್ತಾಯಗೊಳಿಸಿದ್ದು, ಚುನಾವಣೆ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದೆ. ಪರೀಕ್ಷೆ, ಹಬ್ಬಗಳು ಇತ್ಯಾದಿ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿಯೇ ನಾವು ಚುನಾವಣೆ ದಿನಾಂಕ ನಿಗದಿಪಡಿಸುತ್ತೇವೆ. ಒಂದೇ ಹಂತದಲ್ಲಿ‌ ಚುನಾವಣೆ ಮಾಡುವ ಬಗ್ಗೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ. ಎಲ್ಲದರ ಬಗ್ಗೆಯೂ ವಿಮರ್ಶೆ ಮಾಡುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಭಾನುವಾರ ರಾಜ್ಯದಲ್ಲಿ ಮೋದಿ ಹವಾ

ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಕೆಲವು ಬಾರಿ ರಾಜ್ಯಕ್ಕೆ ಆಗಮಿಸಿ ಹಲವು ಅಭಿವೃದ್ಧಿ ಕಾರ್ಯಗಳ, ಹಲವು ಯೋಜನೆಗಳ ಉದ್ಘಾಟನೆ ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರ ಕಾರ್ಯಗಳಲ್ಲಿಯೂ ಭಾಗಿಯಾಗಿದ್ದಾರೆ. ಫೆಬ್ರುವರಿ 27ರಂದು ಶಿವಮೊಗ್ಗಕ್ಕೆ ಬಂದಿದ್ದ ಮೋದಿಯವರು ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಜತೆಗೆ ನೂತನವಾಗಿ ನಿರ್ಮಾಣವಾದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ದರು. ನಂತರ ಬೆಳಗಾವಿಗೆ ತೆರಳಿ ರೋಡ್​ ಶೋ ನಡೆಸಿ, ಸಮಾವೇಶದಲ್ಲಿಯೂ ಭಾಗಿಯಾಗಿದ್ದರು. ಭಾನುವಾರ (ಮಾರ್ಚ್​ 12) ಮಂಡ್ಯ ಗೆಜ್ಜಲಗೆರೆಗೆ ಬರಲಿರುವ ಪ್ರಧಾನಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಧಾರವಾಡಕ್ಕೆ ಐಐಟಿಗೆ ತೆರಳಲಿದ್ದಾರೆ. ಧಾರವಾಡದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಸ್ವಾಗತಕ್ಕೆ ಉಭಯ ಪಟ್ಟಣಗಳು ಸಿದ್ಧವಾಗಿವೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ