Presidential Elections 2022: ರಾಷ್ಟ್ರಪತಿ ಚುನಾವಣೆ; ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಜೂ. 27ಕ್ಕೆ ನಾಮಪತ್ರ ಸಲ್ಲಿಕೆ
Yashwant Sinha: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜುಲೈ 18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ (NDA President Candidate) ಈಗಾಗಲೇ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು (Droupadi Murmu) ಅವರ ಹೆಸರನ್ನು ಘೋಷಿಸಲಾಗಿದೆ. ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ (Yashwant Sinha) ಅವರ ಹೆಸರನ್ನು ಘೋಷಿಸಲಾಗಿದೆ. ಯಶವಂತ್ ಸಿನ್ಹಾ ಜೂನ್ 27ರಂದು ಬೆಳಿಗ್ಗೆ 11.30ಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
2022ರ ಜುಲೈ 18ರಂದು ನಡೆಯಲಿರುವ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ. ಯಶವಂತ್ ಸಿನ್ಹಾ ಜೂನ್ 27ರಂದು ಬೆಳಿಗ್ಗೆ 11.30ಕ್ಕೆ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ದ್ರೌಪದಿ ಮುರ್ಮು ಜೂನ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜುಲೈ 18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.
ಟಿಎಂಸಿ ನಾಯಕರಾಗಿರುವ ಯಶವಂತ್ ಸಿನ್ಹಾ ತಮ್ಮ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಗೆ ಧನ್ಯವಾದ ತಿಳಿಸಿದ್ದು, “ಟಿಎಂಸಿಯಲ್ಲಿ ಮಮತಾಜಿ ಅವರು ನನಗೆ ನೀಡಿದ ಗೌರವ, ಅವಕಾಶಕ್ಕೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ನನ್ನ ಈ ನಿರ್ಧಾರ ಅವರಿಗೂ ಖುಷಿ ತರಲಿದೆ ಎಂದು ನನಗೆ ನಂಬಿಕೆಯಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಯಶವಂತ್ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ಮಾಜಿ ಕೇಂದ್ರ ಸಚಿವರಾಗಿ ಮೆಚ್ಚುಗೆ ಪಡೆದಿದ್ದವರು. ಇದೀಗ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ 13 ಪ್ರತಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಮಂಗಳವಾರ ಅಂತಿಮಗೊಳಿಸಲಾಗಿದೆ. ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸಂಸತ್ ಭವನದಲ್ಲಿ ಕರೆದಿದ್ದ ಸಭೆಯಲ್ಲಿ ಸಿನ್ಹಾ ಅವರ ಹೆಸರನ್ನು ಒಪ್ಪಿಕೊಳ್ಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:01 am, Wed, 22 June 22