ಬೆಂಗಳೂರು, ಸೆಪ್ಟೆಂಬರ್ 24: ಮುಡಾದಲ್ಲಿ (Muda) ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್ ಅನ್ನು ಕರ್ನಾಟಕ ಹೈಕೋರ್ಟ್ (High Court) ಎತ್ತಿ ಹಿಡಿದಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಿದೆ. ಇದರಿಂದ ಸಿಎಂ ಸಿದ್ದಾರಾಮಯ್ಯ ಟೆನ್ಷನ್ ಆಗಿದ್ದು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಹೈಕೋರ್ಟ್ ತೀರ್ಪು ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಚಿವರು ದೌಡಾಯಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಚಿವರಾದ ಶಿವರಾಜ್ ತಂಗಡಗಿ, ಕೃಷ್ಣಭೈರೇಗೌಡ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಿದ್ದಾರೆ.
ಇದನ್ನೂ ಓದಿ: ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ
ಹೈಕೋರ್ಟ್ ತೀರ್ಪು ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ, ಮುಖಂಡರೊಂದಿಗೆ ಸಭೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇರಳಕ್ಕೆ ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಳೆ (ಸೆ.25) ಮಧ್ಯಾಹ್ನ ಕೇರಳದ ಮಲಪ್ಪುರಂ ಜಿಲ್ಲೆಗೆ ತೆರಳಲಿದ್ದು, ಇಲ್ಲಿ ನಡೆಯುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:17 pm, Tue, 24 September 24