ಬೆಂಗಳೂರು, ಆಗಸ್ಟ್ 15: ವಿಧಾನಪರಿಷತ್ಗೆ (Karnataka Legislative Council) ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ.
ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ. ನಾಮನಿರ್ದೇಶನ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ರಾಜ್ಯಪಾಲ ಥಾವರ್ ಚಂದ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಸೀತಾರಾಮ್, ಸುಧಾಮ್ ದಾಸ್ ಹೆಸರಿಗೆ ಪಕ್ಷದೊಳಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸೀತಾರಾಮ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆಯಲ್ಲಿದೆ. ಇನ್ನೊಂದೆಡೆ, ಸುಧಾಮ್ ದಾಸ್ ಅವರು ಐದು ತಿಂಗಳ ಹಿಂದೆಯಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಈ ಇಬ್ಬರನ್ನು ಪರಿಷತ್ಗೆ ಕಳುಹಿಸಲು ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್ಸಿ ಮಹದೇವಪ್ಪ, ಕೆಹೆಚ್ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದರು.
ತನಿಖೆ ಎದುರಿಸುತ್ತಿರುವ ಸೀತಾರಾಮ್ ಅವರನ್ನು ಪರಿಷತ್ಗೆ ಕಳುಹಿಸುವುದನ್ನು ಕಾಂಗ್ರೆಸ್ ಕಾರ್ಯಕರ್ತರೇ ವಿರೋಧಿಸಿದ್ದರು. ಸೀತಾರಾಮ್ ಬದಲಿಗೆ ಮನೋಹರ್ ಅವರಿಗೆ ಎಂಎಲ್ಸಿ ಸ್ಥಾನ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿದ್ದರು.
ಮೂವರು ಸಚಿವರು ಹಾಗೂ ಕಾರ್ಯಕರ್ತರ ವಿರೋಧದ ನಡುವೆಯೂ ಸೀತಾರಾಮ್, ಸುಧಾಮ್ ದಾಸ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಹೀಗಾಗಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಹಿನ್ನೆಲೆ ಆಕಾಂಕ್ಷಿಗಳನ್ನು ಸಂಪರ್ಕಿಸಲು ಕೈ ನಾಯಕರು ಪ್ರಯತ್ನಿಸುತ್ತಿದ್ದಾರೆ.
ಒಂದೆಡೆ, ಆಕಾಂಕ್ಷಿಗಳನ್ನು ಸಂಪರ್ಕಿಸಿ ಸಮಾಧಾನ ಪಡಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ. ಇನ್ನೊಂದೆಡೆ, ಸೀತಾರಾಮ್, ಸುಧಾಮ್ ದಾಸ್ ನಾಮನಿರ್ದೇಶನ ವಿರೋಧಿಸಿ ರಾಜ್ಯಲಾರಿಗೆ ದೂರು ನೀಡಲಾಗಿದೆ. ಹೀಗಾಗಿ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದಾರೆ. ಅದರಂತೆ ನಾಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರನ್ನು ಭೇಟಿಯಾಗಿ ಸೀತಾರಾಮ್, ಸುಧಾಮ್ ದಾಸ್ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸರ್ಕಾರದ ಕಾರ್ಯದರ್ಶಿ ನೀಡಿದ ವಿವರಣೆ ತೃಪ್ತಿ ನೀಡದಿದ್ದಲ್ಲಿ, ಇಬ್ಬರ ಹೆಸರು ತಡೆ ಹಿಡಿಯುವ ಸಾಧ್ಯತೆ ಇದೆ. ಮತ್ತೊಂದೆಡೆ ಲೋಕಸಭಾ ಚುನಾವಣೆಗೂ ಮುನ್ನ ಪರಿಷತ್ಗೆ ಆಯ್ಕೆ ವಿಚಾರದಲ್ಲಿ ಬಂಡಾಯ ಏಳುವ ಸಾಧ್ಯತೆ ಇದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಸಮಾಧಾನಿತರ ಜೊತೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಕೆಪಿಸಿಸಿ ಪದಾಧಿಕಾರಿಗಳಿಗೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:46 pm, Tue, 15 August 23