ಮೂರು ದಿನಗಳಲ್ಲಿ ಕರ್ನಾಟಕ ಪ್ರತಿಪಕ್ಷ ನಾಯಕನ ಆಯ್ಕೆ; ಪ್ರಲ್ಹಾದ್ ಜೋಶಿ
ಈಗಾಗಲೇ ವಿರೋಧ ಪಕ್ಷದ ನಾಯಕನನ್ನು ನೇಮಿಸಿ ಆಗಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು 24 ದಿನಗಳು ಕಳೆದಿವೆ. ಆದರೆ ಬಿಜೆಪಿಯು (BJP) ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ. ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.
ಈಗಾಗಲೇ ವಿರೋಧ ಪಕ್ಷದ ನಾಯಕನನ್ನು ನೇಮಿಸಿ ಆಗಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸುವ ಕುರಿತು ಕೇಳಿದಾಗ, ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜೋಶಿ ಹೇಳಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜೋಶಿ ಹೇಳಿದ್ದಾರೆ.
ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರಲಿದೆ ಕುತ್ತು; ಪರ್ಯಾಯ ನಾಯಕರ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದ್ದು ಅದಕ್ಕೂ ಮುನ್ನ ತೆರವಾಗಿರುವ ಸ್ಥಾನವನ್ನು ಬಿಜೆಪಿ ತುಂಬುವ ನಿರೀಕ್ಷೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ