ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಮುಗಿಬಿದ್ದ ಬಿಜೆಪಿ
ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು, ಡಿಸೆಂಬರ್ 04: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಕೇರಳದಲ್ಲಿ ಶೇ. 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೆ ಕರ್ನಾಟಕದಲ್ಲಿ ಈ ಪಿಡುಗು ಹೆಚ್ಚಿದ್ದು, ಕೂಡಲೇ ಇದನ್ನು ತಡೆಯದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎಂದು ಅವರು ಹೇಳಿದ್ದಾರೆ.
ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಉಪಲೋಕಾಯುಕ್ತರ ಈ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಈ ಹಿಂದೆ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಮಾಡಿದ್ದ ಕಮಿಷನ್ ಆರೋಪ ಉಲ್ಲೇಖಿಸಿ ಕೌಂಟರ್ ಕೊಟ್ಟಿದ್ದಾರೆ.
ಇದನ್ನೂ ಓದಿ: ರಾಜಕೀಯ ಶಾಶ್ವತವಲ್ಲ, ತಲೆ ಕೆಡಿಸಿಕೊಳ್ಳಲ್ಲ ಎಂದಿದ್ದೇಕೆ ಸಿದ್ದರಾಮಯ್ಯ? ಸಂಚಲನ ಸೃಷ್ಟಿಸಿದ ಸಿಎಂ ವೈರಾಗ್ಯದ ಮಾತು
ಆರ್. ಅಶೋಕ್ ಪೋಸ್ಟ್ನಲ್ಲಿ ಏನಿದೆ?

ಆರ್. ಅಶೋಕ್ ಮಾಡಿರುವ ಪೋಸ್ಟ್
ಶೇ. 40 ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಕರ್ನಾಟಕದಲ್ಲಿ ಶೇ. 63 ಭ್ರಷ್ಟಾಚಾರ ಇದೆ ಎಂದು ಸ್ವತಃ ಉಪಲೋಕಾಯುಕ್ತರೇ ರಾಜ್ಯ ಸರ್ಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದೂ ವಿಪಕ್ಷ ನಾಯಕ ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿ ನೇತೃತ್ವದ ಸರ್ಕಾರದ ಮೇಲೆ ಕಾಂಗ್ರೆಸ್ ಶೇ.40ರಷ್ಟು ಕಮಿಷನ್ ಆರೋಪ ಮಾಡಿತ್ತು. ಆದರೆ ಅದೇ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲೀಗ ಅಧಿಕಾರದಲ್ಲಿದೆ. ಈ ಹೊತ್ತಲ್ಲಿ ಉಪ ಲೋಕಾಯುಕ್ತರೇ ನೀಡಿರುವ ಭ್ರಷ್ಟಾಚಾರದ ಹೇಳಿಕೆಯೀಗ ಭಾರಿ ಮಹತ್ವ ಪಡೆದುಕೊಂಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:27 pm, Thu, 4 December 25




