ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಚಿವ ಜಮೀರ್ ಅಹ್ಮದ್‌
Updated By: ಗಂಗಾಧರ​ ಬ. ಸಾಬೋಜಿ

Updated on: Sep 24, 2023 | 5:20 PM

ಬೆಂಗಳೂರು, ಸೆಪ್ಟೆಂಬರ್​ 24: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (hd Kumaraswamy) ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡಿರುವ ಅವರು, ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಹೆಚ್​ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಹೆಚ್​ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಟ್ವೀಟ್

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್​ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು ಎಂದು ಟೀಕಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ. ಹೆಚ್​ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.