ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಾಗುವುದು: ಸಿದ್ದರಾಮಯ್ಯ

|

Updated on: Jun 06, 2023 | 10:50 PM

ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಾಗುವುದು. ಎಸ್​ಸಿ ಎಸ್​ಟಿ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಾಗುವುದು: ಸಿದ್ದರಾಮಯ್ಯ
2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು: ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಾಗುವುದು. ಎಸ್​ಸಿ ಎಸ್​ಟಿ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಿದ್ದರಾಮಯ್ಯ (Siddramaiah) ಹೇಳಿದ್ದಾರೆ. ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. 2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

“ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಿದೆ.


“ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್ ಮಡಲಾಗಿದೆ.

“ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Free Electricity: ರಾಜ್ಯಾದ್ಯಂತ ಎಲ್ಲ ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್​ ಉಚಿತ -ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟನೆ

“ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾಗಿ ಟ್ವೀಟ್ ಮಾಡಲಾಗಿದೆ.

“ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ತಿಳಿಸಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ