ಯತೀಂದ್ರ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

| Updated By: ವಿವೇಕ ಬಿರಾದಾರ

Updated on: Nov 18, 2023 | 9:39 AM

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..?" ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಯತೀಂದ್ರ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ
ವರ್ಗಾವಣೆ ಪತ್ರ (ಎಡಚಿತ್ರ) ಹೆಚ್​ಡಿ ಕುಮಾರಸ್ವಾಮಿ (ಬಲಚಿತ್ರ)
Follow us on

ಬೆಂಗಳೂರು ನ.18: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆ (ಮುಖ್ಯಮಂತ್ರಿ ಸಿದ್ದರಾಮಯ್ಯ) ಅವರೊಂದಿಗೆ ನಡೆಸಿದ ಫೋನ್​ ಕಾಲ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆ ವಿಡಿಯೋ ವೈರಲ್​ ಆಗುತ್ತಿದ್ದಂತೆ, ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮುಗಿಬಿದ್ದಿದ್ದು, ವರ್ಗಾವಣೆ ದಂಧೆಗೆ ಈ ವಿಡಿಯೋನೆ ಸಾಕ್ಷಿ ಎಂಬಂತೆ ಆರೋಪ ಮಾಡಿದವು. ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವೈಎಸ್​ಟಿ ಟ್ಯಾಕ್ಸ್​ ಅಂತ ಆರೋಪಿಸಿದ್ದರು. ಇದೀಗ ಸಂಭಾಷಣೆಯಲ್ಲಿ ಕೇಳಿಬಂದ ವಿವೇಕಾನಂದ ಎಂಬ ಹೆಸರಿನ ವ್ಯಕ್ತಿ ಯಾರು ಎಂಬುವುದನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪತ್ತೆ ಹಚ್ಚಿದ್ದು, ಸರಣಿ ಟ್ವೀಟ್​ ಮೂಲಕ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

“ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್​ಆರ್​ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ” ಎಂದು ವ್ಯಂಗ್ಯವಾಡಿದ್ದಾರೆ.

“ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..?” ಎಂದು ಸವಾಲು ಹಾಕಿದ್ದಾರೆ.
“ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು” ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ:  ಯತೀಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಿಎಂ ಸಿದ್ದರಾಮಯ್ಯ ಒಂದು ನಿದರ್ಶನ ಮೆರೆಯಲಿ: ಡಾ ಸಿಎನ್ ಅಶ್ವಥ್ ನಾರಾಯಣ

“ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್​​ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಏನಂತೀರಿ?” ಎಂದು ಪ್ರಶ್ನಿಸಿದರು.


“ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಮ್​ ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-ಡಿಸಿಎಮ್​ ನಿರ್ದೇಶಕ.. ಹೇಗಿದೆ? ಎಂದರು.

“ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏನಿದು ವಿವೇಕಾನಂದ ಹೆಸರಿನ ವಿವಾದ ​

ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ದೂರವಾಣಿ ಕರೆ ಮಾಡಿ ಅಪ್ಪ ಹೇಳಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದರು. ತಂದೆಯೊಂದಿಗೆ ಮಾತನಾಡಿದ್ದ ಫೋನ್​ ಕಾಲ್​​​ ವಿಡಿಯೋ ವೈರಲ್​​ ಆಗಿತ್ತು. ಈ ವಿಡಿಯೋದಲ್ಲಿ ಯಾವುದೋ ಲಿಸ್ಟ್​ ಬಗ್ಗೆ ಮಾತನಾಡುತ್ತ ವಿವೇಕಾನಂದ ಎಂಬ ಹೆಸರನ್ನು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ವಿವೇಕಾನಂದ ಎಂಬ ಹೆಸರಿನ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 am, Sat, 18 November 23