ನೆರೆ ಸಂತ್ರಸ್ತರಿಗೆ ನಯಾ ಪೈಸೆ ನೀಡಿಲ್ಲ; ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟ್ವೀಟ್​

ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ಅಂದಾಜು 36 ಸಾವಿರ ಕೋಟಿ ರೂ. ನಷ್ಟವಾಗಿದೆ. ಆದ್ರೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಪ್ರವಾಹ ಪೀಡಿತ ರೈತರ ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟಿಸ್ ಜಾರಿ ಮಾಡಿ ಕಿರುಕುಳು ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರವಾಹದಿಂದ ಮನೆ, ಗದ್ದೆ ಕಳೆದುಕೊಂಡು ರೈತರು ಅಸಹಾಯಕರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಐವರು ರೈತರ ಕುಟುಂಬಕ್ಕೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ಪಿಎಂ ಮೋದಿ ಹಾಜರಿದ್ದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು ಎಂದು ಮೋದಿಯನ್ನು ಸಿದ್ದರಾಮಯ್ಯ ಕುಟುಕಿದ್ದಾರೆ.

Related Posts :

Category:

error: Content is protected !!

This website uses cookies to ensure you get the best experience on our website. Learn more