ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

Ganesh Chaturthi 2023: ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹಲವು ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಯಾವ ಸ್ಥಳಗಳಿಗೆ ಮತ್ತು ಎಲ್ಲೆಲ್ಲಿಂದ ಬೆಂಗಳೂರಿಗೆ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ಗಳು ಕಾರ್ಯಾಚರಿಸಲಿವೆ ಎಂಬ ವಿವರ ಇಲ್ಲಿದೆ.

ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Sep 12, 2023 | 10:45 AM

ಬೆಂಗಳೂರು, ಸೆಪ್ಟೆಂಬರ್ 11: ಗೌರಿ ಗಣೇಶ ಹಾಗೂ ಗಣೇಶ ಚತುರ್ಥಿ (Ganesh Chaturthi 2023) ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ವಾರಾಂತ್ಯ ದಿನಗಳಾದ ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹಲವು ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್​ 18ರಂದು ಹೆಚ್ಚುವರಿ ಬಸ್​ಗಳನ್ನು ಹೊರಡಿಸಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಬೆಂಗಳೂರಿನಿಂದ ಯಾವ ಸ್ಥಳಗಳಿಗೆ ಮತ್ತು ಎಲ್ಲೆಲ್ಲಿಂದ ಬೆಂಗಳೂರಿಗೆ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ಗಳು ಕಾರ್ಯಾಚರಿಸಲಿವೆ ಎಂಬ ವಿವರ ಇಲ್ಲಿದೆ.

  • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದರ್ಗಿ‌, ಬೀದರ್, ತಿರುಪತಿ, ವಿಜಯವಾಡ. ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ.
  • ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಲ್ಲಿಯೂ ಹೆಚ್ಚುವರಿ ಬಸ್​​ ಓಡಾಟ ನಡೆಸಲಿವೆ.
  • ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕಕ್ಕಿಂತ ಹೆಚ್ಚು ಮಂದಿ ಟಿಕೆಟ್ ಕಾಯ್ದಿರಿಸಿದರೆ ಶೇ 5ರ ವರೆಗೆ ರಿಯಾಯತಿ

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: KSET-2023: ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ: ಕೆಇಎಯಿಂದ ಅಧಿಸೂಚನೆ

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Mon, 11 September 23