ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಹೊಸ ದಾಖಲೆ ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 4ನೇ ಇನಿಂಗ್ಸ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಟೋಕ್ಸ್ ಬಿರುಸಿನ ಇನಿಂಗ್ಸ್ ಆಡಿದರು.
ವಿಂಡೀಸ್ ನೀಡಿದ 81 ರನ್ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡದಕ್ಕೆ ಸ್ಟೋಕ್ಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಪರಿಣಾಮ ಸ್ಟೋಕ್ಸ್ ಬ್ಯಾಟ್ನಿಂದ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳು ಮೂಡಿಬಂತು. ಈ ಮೂಲಕ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬೆನ್ ಸ್ಟೋಕ್ಸ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು. 1981 ರಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಬಾಥಮ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ 43 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಬೆನ್ ಸ್ಟೋಕ್ಸ್ ಯಶಸ್ವಿಯಾಗಿದ್ದಾರೆ.
ಇದೇ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಹಾಗೂ ಬೆನ್ ಡಕೆಟ್ ಜೊತೆಗೂಡಿ ಕೇವಲ 4.2 ಓವರ್ಗಳಲ್ಲಿ ತಂಡದ ಮೊತ್ತವನ್ನು 50 ರನ್ಗಳ ಗಡಿದಾಟಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ ಐವತ್ತು ರನ್ ಕಲೆಹಾಕಿದ ತಂಡವೆಂಬ ದಾಖಲೆಯನ್ನು ಇಂಗ್ಲೆಂಡ್ ನಿರ್ಮಿಸಿದೆ.
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ ನೀಡಿದ 81 ರನ್ಗಳ ಗುರಿಯನ್ನು ಇಂಗ್ಲೆಂಡ್ ಕೇವಲ 7.2 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 10 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ತಂಡ 3-0 ಅಂತರದಿಂದ ಗೆದ್ದುಕೊಂಡಿದೆ.
ಅಂದಹಾಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಿಸ್ಬಾ-ಉಲ್-ಹಕ್ ಹೆಸರಿನಲ್ಲಿದೆ. 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಿಸ್ಬಾ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.