ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಕೋಲ್ಕತ್ತಾದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 132 ರನ್ ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಭಾರತದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಅಭಿಷೇಕ್ ಶರ್ಮಾ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಸಾಲ್ಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಬೆನ್ ಡಕೆಟ್ ಕೂಡ 4 ರನ್‌ಗಳಿಗೆ ಸುಸ್ತಾದರಯ. ಬ್ರೂಕ್ ಇನ್ನಿಂಗ್ಸ್ 17 ರನ್‌ಗಳಿಗೆ ಅಂತ್ಯವಾದರೆ, ಆ ನಂತರ ಬಂದ ಲಿವಿಂಗ್ಸ್ಟನ್ ಬಂದಷ್ಟೇ ವೇಗವಾಗಿ ಸೊನ್ನೆಗೆ ಪೆವಿಲಿಯನ್ ಸೇರಿಕೊಂಡರು. ಯುವ ಆಟಗಾರ ಬೆಥೆಲ್ ಕೂಡ 7 ರನ್‌ಗಳಿಗೆ ಬ್ಯಾಟ್ ಎತ್ತಿಟ್ಟರು.
ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್‌ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಯಾವ ಬ್ಯಾಟರ್ಗೂ ಭಾರತದ ಬೌಲರ್ಗಳ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಇತ್ತ ಭಾರತದ ಪರ ಮಾರಕ ದಾಳಿ ನಡೆಸಿದ ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ಮಾಡಿದರು. ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಬೌಲಿಂಗ್ ಮಾಡಿ ತಲಾ 2 ವಿಕೆಟ್ ಪಡೆದರು.
ಇಂಗ್ಲೆಂಡ್ ನೀಡಿದ 132 ರನ್‌ಗಳ ಕಡಿಮೆ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ, ಆರ್ಚರ್ ಮೊದಲು ಸ್ಯಾಮ್ಸನ್ (26) ಮತ್ತು ನಂತರ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಭಾರತದ ಇನ್ನಿಂಗ್ಸ್ ಅನ್ನು ಹಳಿತಪ್ಪಿಸಿದರು. ಆದರೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ನನ್ನು ದಂಡಿಸಿದ ಅಭಿಷೇಕ್ ಇದರೊಂದಿಗೆ ಅಂತರರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಜಂಟಿ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.
ಆದಿಲ್ ರಶೀದ್ ಎಸೆತದಲ್ಲಿ ವಿಕೆಟ್ ಒಪ್ಪಿಸುವುದಕ್ಕೂ ಮುನ್ನ ಅಭಿಷೇಕ್ ಕೇವಲ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್ಗಳ ಸಹಿತ 79 ರನ್ ಕಲೆಹಾಕಿದರು. ಆ ನಂತರ ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು. ತಿಲಕ್ 16 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗಿ ಉಳಿದರೆ, ಹಾರ್ದಿಕ್ ನಾಲ್ಕು ಎಸೆತಗಳಲ್ಲಿ ಮೂರು ರನ್ ಗಳಿಸಿ ಅಜೇಯರಾಗಿ ಮರಳಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ