ಅದ್ಭುತ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ಆಟಗಾರನ ಬಹುಪರಾಕ್
Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯನ್ನು ನಾಲ್ಕು ಸ್ಟೇಡಿಯಂಗಳಲ್ಲಿ ಆಯೋಜಿಸಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಿದ ಈ ಟೂರ್ನಿಯ ನಾಲ್ಕು ಪಂದ್ಯಗಳಿಗೆ ದುಬೈ ಆತಿಥ್ಯವಹಿಸಿದರೆ, ಉಳಿದ ಮ್ಯಾಚ್ಗಳು ಪಾಕಿಸ್ತಾನದ ಕರಾಚಿ, ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ನಡೆದಿದೆ. ಹೀಗೆ ಅದ್ಭುತವಾಗಿ ಟೂರ್ನಿ ಆಯೋಜಿಸಿದ ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ಆಟಗಾರ ಅಲೆಕ್ಸ್ ಕ್ಯಾರಿ ಧನ್ಯವಾದ ತಿಳಿಸಿದ್ದಾರೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ ಟಾಪ್-4 ತಂಡಗಳೆಂದರೆ ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ. ಮೊದಲ ಸೆಮಿಫೈನಲ್ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತರೆ, ದ್ವಿತೀಯ ಸೆಮಿಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ಜಯ ಸಾಧಿಸಿತ್ತು. ಇದೀಗ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇತ್ತ ಆಸೀಸ್ ಪಡೆ ಹೊರಬೀಳುತ್ತಿದ್ದಂತೆ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅಲೆಕ್ಸ್ ಕ್ಯಾರಿ, ಅದ್ಭುತ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿದ್ದಕ್ಕಾಗಿ ಪಾಕಿಸ್ತಾನಕ್ಕೆ ಧನ್ಯವಾದಗಳು. ನಾವು ನಿರೀಕ್ಷಿಸಿದ್ದ ಫಲಿತಾಂಶ ನಿಖರವಾಗಿ ಬಂದಿಲ್ಲ, ಆದರೆ ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಈ ಮೂಲಕ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಗೆ ಆಯೋಜಿಸಿದ್ದ ಪಾಕಿಸ್ತಾನದ ಆತಿಥ್ಯಕ್ಕೆ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಪರ ಮೂರು ಪಂದ್ಯಗಳನ್ನಾಡಿರುವ ಅಲೆಕ್ಸ್ ಕ್ಯಾರಿ 2 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 2 ಅರ್ಧಶತಕಗಳೊಂದಿಗೆ ಒಟ್ಟು 130 ರನ್ ಕಲೆಹಾಕಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅಲೆಕ್ಸ್ 57 ಎಸೆತಗಳಲ್ಲಿ 61 ರನ್ ಬಾರಿಸಿ ಮಿಂಚಿದ್ದರು.
ಇದಾಗ್ಯೂ ನಿರ್ಣಾಯಕ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 4 ವಿಕೆಟ್ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದರೆ, ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಿದೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಯಾವಾಗ?
ಚಾಂಪಿಯನ್ಸ್ ಟ್ರೋಫಿಯ ಅಂತಿಮ ಹಣಾಹಣಿ ಮಾರ್ಚ್ 9 ರಂದು ನಡೆಯಲಿದೆ. ಭಾನುವಾರ ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಇದನ್ನೂ ಓದಿ: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ಮಿಲ್ಲರ್
ಉಭಯ ತಂಡಗಳು 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವುದು ವಿಶೇಷ. ಅಂದರೆ 2000 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿ ನ್ಯೂಝಿಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಮತ್ತೆ ಉಭಯ ತಂಡಗಳು ಅಂತಿಮ ಹಣಾಹಣಿಗೆ ಸಜ್ಜಾಗಿದೆ. ಹೀಗಾಗಿ ಈ ಪಂದ್ಯದಲ್ಲೂ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
Published On - 10:00 am, Sat, 8 March 25