Ashes 2023: ಕ್ರಿಕೆಟ್ ಕಾಶಿ ಲಾರ್ಡ್ಸ್ (Lords) ಮೈದಾನದಲ್ಲಿ ನಡೆದ ಆ್ಯಶಸ್ ಸರಣಿಯ (Ashes Series 2023) 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ (England) ವಿರುದ್ಧ ಆಸ್ಟ್ರೇಲಿಯಾ (Australia) ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ (66) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ (110) ಶತಕ ಬಾರಿಸಿದರೆ, ಟ್ರಾವಿಸ್ ಹೆಡ್ (77) ಬಿರುಸಿನ ಅರ್ಧಶತಕ ಸಿಡಿಸಿದ್ದರು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡವು 416 ರನ್ ಕಲೆಹಾಕಿ ಆಲೌಟ್ ಆಯಿತು.
ಆ ಬಳಿಕ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಬೆನ್ ಡಕೆಟ್ 98 ರನ್ ಬಾರಿಸಿದರೆ, ಹ್ಯಾರಿ ಬ್ರೂಕ್ (50) ಅರ್ಧಶತಕ ಸಿಡಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ಇಂಗ್ಲೆಂಡ್ ಬ್ಯಾಟರ್ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ 325 ರನ್ಗಳಿಗೆ ಇಂಗ್ಲೆಂಡ್ ಸರ್ವಪತನ ಕಂಡಿತು.
ಮೊದಲ ಇನಿಂಗ್ಸ್ನಲ್ಲಿನ 91 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಈ ಬಾರಿ ಉಸ್ಮಾನ್ ಖ್ವಾಜಾ (77) ಮಿಂಚಿದರು. ಆದರೆ ಸ್ಟುವರ್ಟ್ ಬ್ರಾಡ್ (4 ವಿಕೆಟ್) ಅವರ ಮಿಂಚಿನ ದಾಳಿ ಮುಂದೆ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಪೆವಿಲಿಯನ್ ಪೆರೇಡ್ ನಡೆಸಿದರು. ಪರಿಣಾಮ ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡವು 279 ರನ್ಗಳಿಗೆ ಆಲೌಟ್ ಆಯಿತು.
ಮೊದಲ ಇನಿಂಗ್ಸ್ನ ಹಿನ್ನಡೆ ಸೇರಿ ದ್ವಿತೀಯ ಇನಿಂಗ್ಸ್ನಲ್ಲಿ 371 ರನ್ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ಪರ ಬೆನ್ ಡಕೆಟ್ (83) ಆಕರ್ಷಕ ಅರ್ಧಶತಕ ಬಾರಿಸಿದರು. ಆದರೆ ಉಳಿದ ಬ್ಯಾಟರ್ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ 193 ರನ್ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡವು ಪ್ರಮುಖ 6 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಆಸೀಸ್ ಬೌಲರ್ಗಳ ಬೆಂಡೆತ್ತಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಸ್ಟೋಕ್ಸ್ ಕೇವಲ 142 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಭರ್ಜರಿ ಸೆಂಚುರಿ ಬಳಿಕ ಕೂಡ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಸ್ಟೋಕ್ಸ್ ಇಂಗ್ಲೆಂಡ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ ಗೆಲ್ಲಲು ಕೇವಲ 70 ರನ್ಗಳ ಅವಶ್ಯಕತೆಯಿರುವಾಗ ಬಿರುಸಿನ ಹೊಡೆತಕ್ಕೆ ಮುಂದಾಗಿ ಹ್ಯಾಝಲ್ವುಡ್ಗೆ ವಿಕೆಟ್ ಒಪ್ಪಿಸಿದರು.
ಇದರೊಂದಿಗೆ 214 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 9 ಫೋರ್ನೊಂದಿಗೆ 155 ರನ್ ಬಾರಿಸಿದ ಬೆನ್ ಸ್ಟೋಕ್ಸ್ ಅವರ ಇನಿಂಗ್ಸ್ ಅಂತ್ಯವಾಯಿತು. ಇದರ ಬೆನ್ನಲ್ಲೇ ಒಲ್ಲಿ ರಾಬಿನ್ಸನ್ (1) ಹಾಗೂ ಸ್ಟುವರ್ಟ್ ಬ್ರಾಡ್ (11) ಕೂಡ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಜೋಶ್ ಟಂಗ್ (19) ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಬೌಲ್ಡ್ ಆಗುವುದರೊಂದಿಗೆ ಇಂಗ್ಲೆಂಡ್ ತಂಡ 327 ರನ್ಗಳಿಗೆ ದ್ವಿತೀಯ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು 43 ರನ್ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿದೆ.
ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು. ಇನ್ನು ಜುಲೈ 6 ರಿಂದ ಹೆಡಿಂಗ್ಲೆಯಲ್ಲಿ ಶುರುವಾಗಲಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ಆಸ್ಟ್ರೇಲಿಯಾ ವಶವಾಗಲಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲಿ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್) , ಸ್ಟುವರ್ಟ್ ಬ್ರಾಡ್ , ಒಲ್ಲಿ ರಾಬಿನ್ಸನ್ , ಜೋಶ್ ಟಂಗ್ , ಜೇಮ್ಸ್ ಅ್ಯಂಡರ್ಸನ್.
ಇದನ್ನೂ ಓದಿ: Ben Stokes: 4,6,6,6: ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ದಾಖಲೆ ಬರೆದ ಬೆನ್ ಸ್ಟೋಕ್ಸ್
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ , ಕ್ಯಾಮೆರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ಪ್ಯಾಟ್ ಕಮಿನ್ಸ್ (ನಾಯಕ) , ನಾಥನ್ ಲಿಯಾನ್ , ಜೋಶ್ ಹ್ಯಾಝಲ್ವುಡ್.