Ashes 2025: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ

Australia vs England: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 17 ರಿಂದ ಶುರುವಾಗಲಿದ್ದು, ಈ ಮ್ಯಾಚ್ ಮೂಲಕ ಪ್ಯಾಟ್ ಕಮಿನ್ಸ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.

Ashes 2025: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ
Australia

Updated on: Dec 16, 2025 | 11:05 AM

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಬುಧವಾರದಿಂದ ಅಡಿಲೇಡ್​ನಲ್ಲಿ ಶುರುವಾಗಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಪ್ಯಾಟ್ ಕಮಿನ್ಸ್ ತಂಡಕ್ಕೆ ಮರಳಿದ್ದು, ಆರಂಭಿಕ ದಾಂಡಿಗ ಉಸ್ಮಾನ್ ಖ್ವಾಜಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರ್ಪಡೆಗೊಳಿಸಲಾಗಿದೆ.

ಕಮಿನ್ಸ್​ ಕಪ್ತಾನ:

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ನಾಯಕನಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಮಿನ್ಸ್  ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.

ಹೀಗಾಗಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ಯಾಟ್ ಕಮಿನ್ಸ್ ಮರಳಿರುವುದರಿಂದ ಅವರಿಗೆ ಮತ್ತೆ ನಾಯಕತ್ವ ನೀಡಲಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಮ್ಯಾಚ್​ಗಳಲ್ಲಿ ಕಮಿನ್ಸ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ ಪಂದ್ಯ:

ಅಡಿಲೇಡ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲೆರಡು ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಆಸ್ಟ್ರೇಲಿಯಾ ದ್ವಿತೀಯ ಪಂದ್ಯದಲ್ಲೂ 8 ವಿಕೆಟ್​ಗಳ ಜಯ ಸಾಧಿಸಿದೆ.

ಈ ಮೂಲಕ 5 ಮ್ಯಾಚ್​ಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ಇಂಗ್ಲೆಂಡ್ ತಂಡ ಮೂರನೇ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಇತ್ತ ಆಸ್ಟ್ರೇಲಿಯಾ ತಂಡವು ಅಡಿಲೇಡ್​ನಲ್ಲಿ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಹೀಗಾಗಿ ಅಡಿಲೇಡ್​ನ ಓವಲ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಮೂರನೇ ಟೆಸ್ಟ್​ಗೆ ಉಭಯ ತಂಡಗಳ ಪ್ಲೇಯಿಂಗ್ 11:

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಜೇಕ್ ವೆದರಾಲ್ಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೊಲ್ಯಾಂಡ್.

ಇದನ್ನೂ ಓದಿ: IPL 2026 Auction: ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಜೋಶ್ ಟಂಗ್.