
ಆಸ್ಟ್ರೇಲಿಯಾ ತಂಡದ ಸ್ಟಾರ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಟೆಸ್ಟ್ಗೆ ವಿದಾಯ ಹೇಳಿ ವರ್ಷಗಳಾಗುತ್ತಾ ಬಂದಿದೆ. ಇದಾಗ್ಯೂ ಆಸೀಸ್ ಪಡೆಗೆ ಬದಲಿ ಆರಂಭಿಕ ಆಟಗಾರ ಸಿಕ್ಕಿಲ್ಲ. ವಾರ್ನರ್ ನಿವೃತ್ತಿ ಬೆನ್ನಲ್ಲೇ ಸ್ಟೀವ್ ಸ್ಮಿತ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸಲಾಗಿತ್ತು. ಆದರೆ ಈ ಪ್ರಯೋಗ ಕೈ ಕೊಟ್ಟಿದ್ದರಿಂದ ನಾಥನ್ ಮೆಕ್ಸ್ವೀನಿ ಅವರನ್ನು ಆರಂಭಿಕನಾಗಿ ಪರಿಚಯಿಸಲಾಯಿತು.
ಮೆಕ್ಸ್ವೀನಿ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಯಾಮ್ ಕೊನ್ಸ್ಟಾಸ್ ಅವರನ್ನು ಕಣಕ್ಕಿಳಿಸಲಾಯಿತು. ಕೊನ್ಸ್ಟಾಸ್ ಮೊದಲ ಪಂದ್ಯದಲ್ಲಿ ಅಬ್ಬರಿಸಿದರೂ ಆ ಬಳಿಕ ಸತತ ವೈಫಲ್ಯ ಅನುಭವಿಸಿದರು. ಹೀಗಾಗಿಯೇ ಆ್ಯಶಸ್ ಸರಣಿಯಿಂದ ಸ್ಯಾಮ್ ಕೊನ್ಸ್ಟಾಸ್ ಅವರನ್ನು ಕೈ ಬಿಡಲಾಗಿದೆ.
ಅವರ ಬದಲಿಗೆ ಅನುಭವಿ ಆಟಗಾರ ಜೇಕ್ ವೆದರಾಲ್ಡ್ ಅವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಆಸೀಸ್ ಪರ ವೆದರಾಲ್ಡ್ ಹಾಗೂ ಉಸ್ಮಾನ್ ಖ್ವಾಜಾ ಆರಂಭಿಕರಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.
31 ವರ್ಷದ ಜೇಕ್ ವೆದರಾಲ್ಡ್ ಆಸ್ಟ್ರೇಲಿಯಾ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಅವರನ್ನು ಚೊಚ್ಚಲ ಬಾರಿ ಆಸೀಸ್ ಪಡೆಗೆ ಆಯ್ಕೆ ಮಾಡಲಾಗಿದೆ. ಈ ಆಯ್ಕೆಯೊಂದಿಗೆ ಜೇಕ್ ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಈ ಪಂದ್ಯದಲ್ಲಿ ಜೇಕ್ ವೆದರಾಲ್ಡ್ ಯಶಸ್ವಿಯಾದರೆ ಉಳಿದ 4 ಮ್ಯಾಚ್ಗಳಿಗೂ ಅವರನ್ನು ಮುಂದುವರೆಸಲಾಗುತ್ತದೆ. ಒಂದು ವೇಳೆ ವೈಫಲ್ಯ ಅನುಭಸಿದರೆ, ಆಸ್ಟ್ರೇಲಿಯಾ ತಂಡದ ಆರಂಭಿಕ ಜೋಡಿಯ ಪ್ರಯೋಗ ಮುಂದುವರೆಯಲಿದೆ.
ಆಸ್ಟ್ರೇಲಿಯಾ ಟೆಸ್ಟ್ ತಂಡ (ಮೊದಲ ಪಂದ್ಯಕ್ಕೆ): ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.
ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.
ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್