ಏಷ್ಯಾಕಪ್ನ ಸೂಪರ್-4 ಹಂತದ 4ನೇ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್ಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಮತ್ತೊಂದೆಡೆ ಶ್ರೀಲಂಕಾ ತಂಡವು ಈ ಮ್ಯಾಚ್ನಲ್ಲಿ ಸೋತರೆ ಪಾಕಿಸ್ತಾನ್ ತಂಡದ ಫೈನಲ್ ಆಸೆ ಜೀವಂತವಿರಲಿದೆ. ಹೀಗಾಗಿ ಇಂದಿನ ಪಂದ್ಯವು ಭಾರತ ಹಾಗೂ ಶ್ರೀಲಂಕಾ ತಂಡಗಳಿಗೆ ಅಲ್ಲದೆ ಪಾಕ್ ತಂಡದ ಪಾಲಿಗೂ ನಿರ್ಣಾಯಕವಾಗಿದೆ.
ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಇದುವರೆಗೆ 165 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಬರೋಬ್ಬರಿ 96 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ ಗೆದ್ದಿರುವುದು ಕೇವಲ 57 ಮ್ಯಾಚ್ಗಳಲ್ಲಿ ಮಾತ್ರ. ಇನ್ನು 11 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಇಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿರುವುದು ಸ್ಪಷ್ಟ.
ಆದರೆ ಮತ್ತೊಂದೆಡೆ ಶ್ರೀಲಂಕಾ ತಂಡವು ಕಳೆದ 13 ಏಕದಿನ ಪಂದ್ಯಗಳಲ್ಲಿ ಸತತ ಜಯ ಸಾಧಿಸಿ ದಾಖಲೆ ಬರೆದಿದೆ. ಇದೀಗ ಲಂಕಾ ಪಡೆಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಇದಾಗ್ಯೂ ತವರು ಮೈದಾನದಲ್ಲಿ ಶ್ರೀಲಂಕಾ ತಂಡವನ್ನು ಸೋಲಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಅದರಂತೆ ಶಾರ್ದೂಲ್ ಠಾಕೂರ್ ಬದಲಿಗೆ ಎಡಗೈ ಆಲ್ರೌಂಡರ್ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!