ಪಾಕ್ ಪಲ್ಟಿ… ಟೀಮ್ ಇಂಡಿಯಾ ‘ಚಿನ್ನದ’ ಚಾಂಪಿಯನ್ಸ್
ಏಷ್ಯನ್ ಗೇಮ್ಸ್ ಟಿ20 ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. 10 ತಂಡಗಳು ಕಣಕ್ಕಿಳಿದಿದ್ದ ಈ ಟೂರ್ನಿಯ ಫೈನಲ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಿತ್ತು. ಫೈನಲ್ನಲ್ಲಿ ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಟೀಮ್ ಇಂಡಿಯಾ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಇನ್ನು ಪಾಕ್ ತಂಡ ಬೆಳ್ಳಿ ಪದಕ ಪಡೆದರೆ, ಶ್ರೀಲಂಕಾ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದೆ.

ಏಷ್ಯನ್ ಗೇಮ್ಸ್ನ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಚಿನ್ನದ ಪದಕ ಪಡೆದುಕೊಂಡರೆ, ಸೋತ ಪಾಕಿಸ್ತಾನ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಜಪಾನ್ನ ನಿಶ್ಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್ಗೆ 2 ಓವರ್ಗಳಲ್ಲಿ 28 ರನ್ ಕಲೆಹಾಕಿತು. ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ವೈಭವ್ (15) ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದರು.
ಆ ಬಳಿಕ ಬಂದ ಸಂಜು ಸ್ಯಾಮ್ಸನ್ ಕೇವಲ 2 ರನ್ಗಳಿಸಿ ಕ್ಯಾಚಿತ್ತು ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಗೂಡಿದ ಅಭಿಷೇಕ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಅದರಲ್ಲೂ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳನ್ನು ಬಾರಿಸಿ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಅರ್ಧಶತಕದ ಬಳಿಕ ಕೂಡ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 3 ಫೋರ್ಗಳೊಂದಿಗೆ 61 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ ಇಶಾನ್ ಕಿಶನ್ (20) ಹಾಗೂ ಶ್ರೇಯಸ್ ಅಯ್ಯರ್ (21) ಕೂಡ ವಿಕೆಟ್ ಕೈಚೆಲ್ಲಿದರು. ಪರಿಣಾಮ ಟೀಮ್ ಇಂಡಿಯಾ 150 ರನ್ ಪೂರೈಸಲು 16.4 ಓವರ್ಗಳನ್ನು ತೆಗೆದುಕೊಂಡಿತು.
ಇನ್ನು ಅಂತಿಮ ಓವರ್ಗಳ ವೇಳೆ ಅಬ್ಬರಿಸಿದ ತಿಲಕ್ ವರ್ಮಾ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.
212 ರನ್ಗಳ ಕಠಿಣ ಗುರಿ:
20 ಓವರ್ಗಳಲ್ಲಿ 212 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡಕ್ಕೆ ಮಾಝ್ ಸದಾಕತ್ ಹಾಗೂ ಸಾಹಿಬ್ಝಾದ ಫರ್ಹಾನ್ ಉತ್ತಮ ಆರಂಭ ಒದಗಿಸಿದ್ದರು. ಅದರಂತೆ 3.3 ಓವರ್ಗಳಲ್ಲಿ 33 ರನ್ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ವಾಷಿಂಗ್ಟನ್ ಸುಂದರ್, ಸಾಹಿಬ್ಝಾದ ಫರ್ಹಾನ್ (10) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಉಸ್ಮಾನ್ ಖಾನ್ (3) ವಿಕೆಟ್ ಪಡೆಯುವಲ್ಲಿ ಅಕ್ಷರ್ ಪಟೇಲ್ ಯಶಸ್ವಿಯಾದರು.
ಇದರ ಬೆನ್ನಲ್ಲೇ ಮಾಝ್ ಸದಾಕತ್ (24) ವಾಷಿಂಗ್ಟನ್ ಸುಂದರ್ ಹಿಡಿದ ಅತ್ಯುತ್ತಮ ಕ್ಯಾಚ್ಗೆ ಬಲಿಯಾದರು. ಈ ಹಂತದಲ್ಲಿ ಕಣಕ್ಕಿಳಿದ ಹಸನ್ ನವಾಝ್ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಈ ಮೂಲಕ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.
ಇದಾಗ್ಯೂ ಪಾಕಿಸ್ತಾನ್ ತಂಡಕ್ಕೆ ಕೊನೆಯ 6 ಓವರ್ಗಳಲ್ಲಿ 86 ರನ್ಗಳು ಬೇಕಿದ್ದವು. ಈ ಹಂತದಲ್ಲೂ ಏಕಾಂಗಿ ಹೋರಾಟ ಮುಂದುವರೆಸಿದ ಹಸನ್ ನವಾಝ್ 51 ಎಸೆತಗಳಲ್ಲಿ 96 ರನ್ ಬಾರಿಸಿದರು. ಆದರೆ ಕೊನೆಯ ಓವರ್ನಲ್ಲಿ 33 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು ಕೇವಲ 13 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 19 ರನ್ಗಳ ಭರ್ಜರಿ ಜಯ ಸಾಧಿಸಿ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.
-
ಭಾರತ– 211/6 (20)
-
ಪಾಕಿಸ್ತಾನ್– 192/6 (20)
ಭಾರತ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: ಕೆನಡಾ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ
ಪಾಕಿಸ್ತಾನ್ (ಪ್ಲೇಯಿಂಗ್ XI): ಸಾಹಿಬ್ಝಾದ ಫರ್ಹಾನ್ (ನಾಯಕ), ಮಾಝ್ ಸದಾಕತ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಹಸನ್ ನವಾಝ್, ಅಬ್ದುಲ್ ಸಮದ್, ಅರಾಫತ್ ಮಿನ್ಹಾಸ್, ಅಹ್ಮದ್ ದಾನಿಯಾಲ್, ಸಾದ್ ಮಸೂದ್, ಅಬ್ರಾರ್ ಅಹ್ಮದ್, ಸುಫ್ಯಾನ್ ಮುಖೀಮ್.
Published On - 1:31 pm, Sat, 3 October 26




