IND vs AUS: 47 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಭಾರತಕ್ಕೆ ಐತಿಹಾಸಿಕ ಜಯ
Australia vs India Test: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 222 ರನ್ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.
ಒಪ್ಟಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 150 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು ಭಾರತೀಯ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 104 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಬುಮ್ರಾ 30 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.
46 ರನ್ಗಳ ಮುನ್ನಡೆ:
ಮೊದಲ ಇನಿಂಗ್ಸ್ನಲ್ಲಿನ 46 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 201 ರನ್ಗಳ ಜೊತೆಯಾಟವಾಡಿದ ಬಳಿಕ ರಾಹುಲ್ (77) ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ 297 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 3 ಸಿಕ್ಸ್ ಹಾಗೂ 15 ಫೋರ್ಗಳೊಂದಿಗೆ 161 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 6 ವಿಕೆಟ್ ನಷ್ಟಕ್ಕೆ 487 ಪೇರಿಸಿ ಡಿಕ್ಲೇರ್ ಘೋಷಿಸಿತು.
534 ರನ್ಗಳ ಗುರಿ:
ಮೊದಲ ಇನಿಂಗ್ಸ್ನಲ್ಲಿ 46 ರನ್ಗಳ ಹಿನ್ನಡೆ ಹೊಂದಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 534 ರನ್ಗಳ ಗುರಿ ಪಡೆಯಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಪರಿಣಾಮ 3ನೇ ದಿನದಾಟದ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ ತಂಡವು 12 ರನ್ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು.
ಇನ್ನು ನಾಲ್ಕನೇ ದಿನದಾಟದ ಆರಂಭದಲ್ಲೇ ಮೊಹಮ್ಮದ್ ಸಿರಾಜ್ ಉಸ್ಮಾನ್ ಖ್ವಾಜಾ (4) ಹಾಗೂ ಸ್ಟೀವ್ ಸ್ಮಿತ್ (17) ವಿಕೆಟ್ ಪಡೆದರು. ಈ ಹಂತದಲ್ಲಿ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಚ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
ಈ ಹಂತದಲ್ಲಿ ಬುಮ್ರಾ ಟ್ರಾವಿಸ್ ಹೆಡ್ (89) ವಿಕೆಟ್ ಪಡೆದರೆ, ನಿತೀಶ್ ರೆಡ್ಡಿ ಮಿಚೆಲ್ ಮಾರ್ಷ್ (47) ಬೌಲ್ಡ್ ಮಾಡಿದರು. ಈ ಎರಡು ವಿಕೆಟ್ ಸಿಗುತ್ತಿದ್ದಂತೆ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್ಗಳು ಆಸ್ಟ್ರೇಲಿಯಾ ತಂಡವನ್ನು 238 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.
ಭಾರತ ಪ್ಲೇಯಿಂಗ್ 11:
- ಜಸ್ಪ್ರೀತ್ ಬುಮ್ರಾ (ನಾಯಕ)
- ಯಶಸ್ವಿ ಜೈಸ್ವಾಲ್ಕೆ
- ಎಲ್ ರಾಹುಲ್
- ದೇವದತ್ ಪಡಿಕ್ಕಲ್
- ವಿರಾಟ್ ಕೊಹ್ಲಿ
- ರಿಷಭ್ ಪಂತ್ (ವಿಕೆಟ್ ಕೀಪರ್)
- ಧ್ರುವ್ ಜುರೇಲ್
- ನಿತೀಶ್ ಕುಮಾರ್ ರೆಡ್ಡಿ
- ವಾಷಿಂಗ್ಟನ್ ಸುಂದರ್ಮೊ
- ಹಮ್ಮದ್ ಸಿರಾಜ್
- ಹರ್ಷಿತ್ ರಾಣಾ.
ಇದನ್ನೂ ಓದಿ: IPL 2025: ಐದನೇ ತಂಡದ ಪರ ಕಣಕ್ಕಿಳಿಯಲಿರುವ ಕೆಎಲ್ ರಾಹುಲ್
ಆಸ್ಟ್ರೇಲಿಯಾ ಪ್ಲೇಯಿಂಗ್ 11:
- ಉಸ್ಮಾನ್ ಖ್ವಾಜಾ
- ನಾಥನ್ ಮೆಕ್‌ಸ್ವೀನಿ
- ಮಾರ್ನಸ್ ಲಾಬುಶೇನ್
- ಸ್ಟೀವ್ ಸ್ಮಿತ್
- ಟ್ರಾವಿಸ್ ಹೆಡ್
- ಮಿಚೆಲ್ ಮಾರ್ಷ್
- ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್)
- ಪ್ಯಾಟ್ ಕಮಿನ್ಸ್ (ನಾಯಕ)
- ಮಿಚೆಲ್ ಸ್ಟಾರ್ಕ್
- ನಾಥನ್ ಲಿಯಾನ್
- ಜೋಶ್ ಹ್ಯಾಝಲ್‌ವುಡ್.