ವಿಶ್ವಕಪ್​ನಲ್ಲಿ ತನ್ನದೇ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ

| Updated By: ಝಾಹಿರ್ ಯೂಸುಫ್

Updated on: Oct 25, 2023 | 8:59 PM

Australia vs Netherlands: ಏಕದಿನ ಕ್ರಿಕೆಟ್​ನಲ್ಲಿ ಬೃಹತ್ ಅಂತರದ ಗೆಲುವು ದಾಖಲಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿದೆ. 2023 ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 317 ರನ್​ಗಳ ಜಯ ಸಾಧಿಸಿ ಈ ವಿಶ್ವ ದಾಖಲೆ ನಿರ್ಮಿಸಿದೆ. ಇದೀಗ ನೆದರ್​ಲೆಂಡ್ಸ್​ ವಿರುದ್ಧ 309 ರನ್​ಗಳ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

ವಿಶ್ವಕಪ್​ನಲ್ಲಿ ತನ್ನದೇ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ
Australia
Follow us on

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 24ನೇ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಆರಂಭದಿಂದಲೇ ನೆದರ್​ಲೆಂಡ್ಸ್ ಬೌಲರ್​ಗಳ ಬೆಂಡೆತ್ತಿದ ಡೇವಿಡ್ ವಾರ್ನರ್ (104) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಮತ್ತೊಂದೆಡೆ ಸ್ಟೀವ್ ಸ್ಮಿತ್ 71 ರನ್​ಗಳನ್ನು ಬಾರಿಸಿದರೆ, ಮಾರ್ನಸ್ ಲಾಬುಶೇನ್ 62 ರನ್​ಗಳ ಕೊಡುಗೆ ನೀಡಿದರು.

ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದರು. ಅಲ್ಲದೆ 44 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 106 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್​ ಪರಿಣಾಮ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು.

400 ರನ್​ಗಳ ಗುರಿ ಪಡೆದ ನೆದರ್​ಲೆಂಡ್ಸ್ ತಂಡವು ಯಾವುದೇ ಹಂತದಲ್ಲೂ ಆಸೀಸ್ ದಾಳಿಯನ್ನು ಎದುರಿಸಲು ಯಶಸ್ವಿಯಾಗಿರಲಿಲ್ಲ. ಪರಿಣಾಮ 21 ಓವರ್​ಗಳಲ್ಲಿ ಕೇವಲ 90 ರನ್​ಗಳಿಸಿ ಆಲೌಟ್ ಆದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 309 ರನ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

ವಿಶ್ವಕಪ್ ದಾಖಲೆ ಬರೆದ ಆಸ್ಟ್ರೇಲಿಯಾ:

ಈ ಗೆಲುವಿನೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಬೃಹತ್ ಅಂತರದ ಜಯ ಸಾಧಿಸಿದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ಪುನರಚ್ಚಿಸಿದರು. ಅಂದರೆ 2015 ರ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ 275 ರನ್​ಗಳ ಗೆಲುವು ಸಾಧಿಸಿದ ದಾಖಲೆ ನಿರ್ಮಿಸಿದ್ದ ಆಸೀಸ್ ಪಡೆ ಈ ಬಾರಿ 309 ರನ್​ಗಳ ಅಂತರದಿಂದ ನೆದರ್​ಲೆಂಡ್ಸ್​ಗೆ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಟೀಮ್ ಇಂಡಿಯಾ ಹೆಸರಿನಲ್ಲಿದೆ ವಿಶ್ವ ದಾಖಲೆ:

ಏಕದಿನ ಕ್ರಿಕೆಟ್​ನಲ್ಲಿ ಬೃಹತ್ ಅಂತರದ ಗೆಲುವು ದಾಖಲಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿದೆ. 2023 ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 317 ರನ್​ಗಳ ಜಯ ಸಾಧಿಸಿ ಈ ವಿಶ್ವ ದಾಖಲೆ ನಿರ್ಮಿಸಿದೆ. ಇದೀಗ ನೆದರ್​ಲೆಂಡ್ಸ್​ ವಿರುದ್ಧ 309 ರನ್​ಗಳ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ಆ್ಯಡಂ ಝಂಪಾ.

ಇದನ್ನೂ ಓದಿ: Glenn Maxwell: ತೂಫಾನ್ ಶತಕ…ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

ನೆದರ್​ಲೆಂಡ್ಸ್​ (ಪ್ಲೇಯಿಂಗ್ XI): ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.