ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಭಾರತ ತಂಡವು ಕೇವಲ 175 ರನ್ಗಳಿಗೆ ಆಲೌಟ್ ಆಗಿದೆ. ಈ ಆಲೌಟ್ನೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 19 ರನ್ಗಳ ಸುಲಭ ಗುರಿ ಪಡೆದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಮಿಚೆಲ್ ಸ್ಟಾರ್ಕ್ ಅವರ ಮಾರಕ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 180 ರನ್ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಮಾರ್ನಸ್ ಲಾಬುಶೇನ್ (64) ಅರ್ಧಶತಕ ಬಾರಿಸಿದರು. ಇನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಕೇವಲ 141 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 17 ಫೋರ್ಗಳೊಂದಿಗೆ 140 ರನ್ ಚಚ್ಚಿದರು. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 337 ರನ್ ಪೇರಿಸಿ ಆಲೌಟ್ ಆಯಿತು.
157 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾದ ಕೆಎಲ್ ರಾಹುಲ್ (7) ಹಾಗೂ ಯಶಸ್ವಿ ಜೈಸ್ವಾಲ್ (24) ಬೇಗನೆ ಔಟಾದರೆ, ಆ ಬಳಿಕ ಬಂದ ಶುಭ್ಮನ್ ಗಿಲ್ 28 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ವಿರಾಟ್ ಕೊಹ್ಲಿ 11 ರನ್ಗಳಿಸಲಷ್ಟೇ ಶಕ್ತರಾದರೆ, ನಾಯಕ ರೋಹಿತ್ ಶರ್ಮಾ 6 ರನ್ಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಪರಿಣಾಮ ದ್ವಿತೀಯ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 5 ವಿಕೆಟ್ ಕಳೆದುಕೊಂಡು 128 ರನ್ ಕಲೆಹಾಕಿತು.
ಮೂರನೇ ದಿನದಾಟದ ಆರಂಭದಲ್ಲೇ ರಿಷಭ್ ಪಂತ್ (28) ವಿಕೆಟ್ ಕಬಳಿಸಿದ ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ತಂಡಕ್ಕೆ ಅಮೂಲ್ಯ ಯಶಸ್ಸು ತಂದು ಕೊಟ್ಟರು. ಇದರ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್ (7) ಕೂಡ ಔಟಾದರು. ಇನ್ನು ಹರ್ಷಿತ್ ರಾಣಾ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
ಇದಾಗ್ಯೂ ಏಕಾಂಗಿ ಹೋರಾಟ ನಡೆಸಿದ ನಿತೀಶ್ ಕುಮಾರ್ ರೆಡ್ಡಿ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 42 ರನ್ ಬಾರಿಸಿ 9ನೇ ವಿಕೆಟ್ ಆಗಿ ಹೊರ ನಡೆದರು. ಅಂತಿಮವಾಗಿ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ 175 ರನ್ಗಳಿಗೆ ಆಲೌಟ್ ಆಯಿತು.
ಇನ್ನು ಮೊದಲ ಇನಿಂಗ್ಸ್ನಲ್ಲಿ 157 ರನ್ಗಳ ಮುನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 19 ರನ್ಗಳಿಸಿದ ಪಂದ್ಯವನ್ನು ಗೆಲ್ಲಬಹುದು.
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
ಇದನ್ನೂ ಓದಿ: ಶರ ವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ರವಿಚಂದ್ರನ್ ಅಶ್ವಿನ್ , ಹರ್ಷಿತ್ ರಾಣಾ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.