IND vs AUS: 4 ಬದಲಾವಣೆಯೊಂದಿಗೆ ಕಣಕ್ಕಿಳಿದ ಆಸ್ಟ್ರೇಲಿಯಾ
Australia vs India, 4th T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ನಾಲ್ಕನೇ ಟಿ20 ಪಂದ್ಯ ಶುರುವಾಗಿದೆ. ಕ್ವೀನ್ಸ್ಲ್ಯಾಂಡ್ನ ಕ್ಯಾರರಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಈ ಪಂದ್ಯವು ಸರಣಿ ಗೆಲ್ಲಲು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇದೀಗ ನಾಲ್ಕನೇ ಪಂದ್ಯದಲ್ಲಿ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಅಲ್ಲದೆ ಅಂತಿಮ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಜಯಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಂದರೆ ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್ ಮುಂದುವರೆಸಿದ್ದಾರೆ.
ಅತ್ತ ಆಸ್ಟ್ರೇಲಿಯಾ ತಂಡವು 4 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದ ಗ್ಲೆನ್ ಮ್ಯಾಕ್ಸ್‌ವೆಲ್, ಆ್ಯಡಂ ಝಂಪಾ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಜೋಶ್ ಫಿಲಿಪೆ ಹಾಗೂ ಬೆನ್ ದ್ವಾರ್ಶುಯಿಸ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಜೋಶ್ ಫಿಲಿಫೆ, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆ್ಯಡಂ ಝಂಪಾ.
ಇದನ್ನೂ ಓದಿ: RCB ಖರೀದಿಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ: ಅದಾನಿ ಕಡೆಯಿಂದ ಟಕ್ಕರ್..!
ಭಾರತ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
