ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಭಾರತದ ವಿರುದ್ಧ 10 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಕೊನೆಗೂ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಭಾರತದ ವಿರುದ್ಧ ಆಸ್ಟ್ರೇಲಿಯಾ ಕೊನೆಯ ಬಾರಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದಿದ್ದು 2014-15 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಸತತ 4 ಬಾರಿ ಸರಣಿ ಗೆದ್ದುಕೊಂಡಿತ್ತು. ಇದೀಗ 10 ವರ್ಷಗಳ ಬಳಿಕ ಮತ್ತೆ ಸರಣಿ ವಶಪಡಿಸಿಕೊಳ್ಳುವಲ್ಲಿ ಆಸೀಸ್ ಪಡೆ ಯಶಸ್ವಿಯಾಗಿದೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಕೇವಲ 185 ರನ್ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವನ್ನು 181 ರನ್ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್ಗಳು ಯಶಸ್ವಿಯಾದರು.
ಮೊದಲ ಇನಿಂಗ್ಸ್ನಲ್ಲಿನ 4 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಯಿತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 61 ರನ್ ಬಾರಿಸಿದರು.
ಆದರೆ ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ ಮೂರನೇ ದಿನದಾಟದ ಆರಂಭದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡು 157 ರನ್ಗಳಿಗೆ ಸರ್ವಪತನ ಕಂಡಿತು. ಅತ್ತ ಮೊದಲ ಇನಿಂಗ್ಸ್ನಲ್ಲಿನ 4 ರನ್ಗಳ ಹಿನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 162 ರನ್ಗಳ ಗುರಿ ಪಡೆಯಿತು.
ಈ ಸುಲಭ ಗುರಿಯನ್ನು ಬೆನ್ನತ್ತಲು ಬಂದ ಆಸ್ಟ್ರೇಲಿಯಾ ತಂಡಕ್ಕೆ ಯುವ ಸ್ಪೋಟಕ ದಾಂಡಿಗ ಸ್ಯಾಮ್ ಕೊನ್ಸ್ಟಾಸ್ ಭರ್ಜರಿ ಆರಂಭ ಒದಗಿಸಿದರು. ಇತ್ತ ಬೆನ್ನು ನೋವಿನ ಕಾರಣ 3ನೇ ದಿನದಾಟದಲ್ಲಿ ಬುಮ್ರಾ ಕೂಡ ಕಣಕ್ಕಿಳಿದಿರಲಿಲ್ಲ. ಇದರ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯನ್ನರು ಮೊದಲ ಮೂರು ಓವರ್ಗಳಲ್ಲೇ 35 ರನ್ ಚಚ್ಚಿದರು.
ಇದಾಗ್ಯೂ ಟೀಮ್ ಇಂಡಿಯಾ 4 ವಿಕೆಟ್ ಕಬಳಿಸಿದರೂ ಆಸ್ಟ್ರೇಲಿಯಾ ತಂಡವು ಯಾವುದೇ ಒತ್ತಡಕ್ಕೆ ಒಳಗಾಗಲಿಲ್ಲ. ಅದರಂತೆ ಮೂರನೇ ದಿನದಾಟದಲ್ಲೇ 162 ರನ್ಗಳ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಸರಣಿಯನ್ನು ಆಸ್ಟ್ರೇಲಿಯಾ 3-1 ಅಂತರದಿಂದ ಗೆದ್ದುಕೊಂಡಿದೆ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಯಾಮ್ ಕೊನ್ಸ್ಟಾಸ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಬ್ಯೂ ವೆಬ್ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.
ಇದನ್ನೂ ಓದಿ: IND vs AUS: ಮೈದಾನ ತೊರೆದ ಜಸ್ಪ್ರೀತ್ ಬುಮ್ರಾ: ವಿರಾಟ್ ಕೊಹ್ಲಿ ಕ್ಯಾಪ್ಟನ್
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್ಪ್ರೀತ್ ಬುಮ್ರಾ (ನಾಯಕ) , ಪ್ರಸಿದ್ಧ್ ಕೃಷ್ಣ , ಮೊಹಮ್ಮದ್ ಸಿರಾಜ್.