ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ
Australia’s Squad: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆಸ್ಟ್ರೇಲಿಯಾ ತಂಡವು ಫೆಬ್ರವರಿ 22 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಆಸ್ಟ್ರೇಲಿಯಾ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದ್ದು, ಇವರ ಜೊತೆ ಯುವ ಆಟಗಾರ ಆರೋನ್ ಹಾರ್ಡಿಗೂ ತಂಡದಲ್ಲಿ ಸ್ಥಾನ ಕಲ್ಪಿಸಿದ್ದಾರೆ. ಇಲ್ಲಿ ಆರಂಭಿಕರ ಸ್ಥಾನದಲ್ಲಿ ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್ ಹಾಗೂ ಆರೋನ್ ಹಾರ್ಡಿ ಆಯ್ಕೆಯಾಗಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾಗಿ ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಆಲ್ರೌಂಡರ್ಗಳಾಗಿ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಮಾರ್ಷ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ವಿಕೆಟ್ ಕೀಪರ್ಗಳಾಗಿ ಸ್ಥಾನ ಪಡೆದಿರುವುದು ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್.
ವೇಗದ ಬೌಲರ್ಗಳಾಗಿ ಜೋಶ್ ಹ್ಯಾಝಲ್‌ವುಡ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ತಂಡದಲ್ಲಿದ್ದು, ಏಕೈಕ ಸ್ಪಿನ್ನರ್ ಆಗಿ ಆ್ಯಡಂ ಝಂಪಾ ಸ್ಥಾನ ಪಡೆದಿದ್ದಾರೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗೆ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.
ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.
ಇನ್ನು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾ ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಇದನ್ನೂ ಓದಿ: ಭಾರತ vs ಪಾಕಿಸ್ತಾನ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅಲಭ್ಯ
ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದ್ದು, ಫೆಬ್ರವರಿ 22 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಾಹೋರ್ನ ಗದ್ದಾಫಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ…
- 22 ಫೆಬ್ರವರಿ – ಆಸ್ಟ್ರೇಲಿಯಾ vs ಇಂಗ್ಲೆಂಡ್, ಲಾಹೋರ್
- ಫೆಬ್ರವರಿ 25 – ಆಸ್ಟ್ರೇಲಿಯಾ vs ಸೌತ್ ಆಫ್ರಿಕಾ, ರಾವಲ್ಪಿಂಡಿ
- 28 ಫೆಬ್ರವರಿ – ಆಸ್ಟ್ರೇಲಿಯಾ vs ಅಫ್ಘಾನಿಸ್ತಾನ್, ಲಾಹೋರ್