IND vs WI: ಮೂರೇ ದಿನಕ್ಕೆ ಮುಗಿದ ಮೊದಲ ಟೆಸ್ಟ್: 2ನೇ ಟೆಸ್ಟ್ಗೆ ಪಿಚ್ ಬದಲು..!
India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಅಕ್ಟೋಬರ್ 10 ರಿಂದ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ವೆಸ್ಟ್ ಇಂಡೀಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲ ಪಂದ್ಯದಲ್ಲಿ ಸೋತಿರುವ ವಿಂಡೀಸ್ ಪಡೆ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಕೇವಲ ಮೂರೇ ದಿನಕ್ಕೆ ಮುಕ್ತಾಯಗೊಂಡಿತ್ತು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ ಕಲೆಹಾಕಿದ್ದು ಕೇವಲ 162 ರನ್ಗಳು ಮಾತ್ರ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 448 ರನ್ಗಳಿಸಿ ಡಿಕ್ಲೇರ್ ಘೋಷಿಸಿತು.
286 ರನ್ಗಳ ಪ್ರಥಮ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ಕೇವಲ 146 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 140 ರನ್ಗಳ ಭರ್ಜರಿ ಜಯ ಸಾಧಿಸಿತು.
ಇತ್ತ ಕೇವಲ ಮೂರೇ ದಿನಕ್ಕೆ ಪಂದ್ಯ ಮುಗಿದಿರುವುದು ಇದೀಗ ಚಿಂತೆಗೆ ಕಾರಣವಾಗಿದೆ. ಅಂದರೆ ಐದು ದಿನಗಳ ಟೆಸ್ಟ್ ಪಂದ್ಯವು ಕೇವಲ ಮೂರು ದಿನಕ್ಕೆ ಕೊನೆಗೊಂಡಿದ್ದರಿಂದ ಪ್ರೇಕ್ಷಕರಿಗೆ ಹೆಚ್ಚಿನ ಮನರಂಜನೆ ಸಿಕ್ಕಿಲ್ಲ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಬೌಲರ್ಗಳು ಸಂಪೂರ್ಣ ಪಾರುಪತ್ಯ ಮೆರೆದಿದ್ದರು.
ಹೀಗಾಗಿಯೇ ಇದೀಗ ಎರಡನೇ ಪಂದ್ಯಕ್ಕೆ ಬ್ಯಾಟಿಂಗ್ ಸ್ನೇಹಿ ಪಿಚ್ ನಿರ್ಮಿಸಲು ನಿರ್ಧರಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯಗಳಿಗೆ ಸ್ಪಿನ್ ಸ್ನೇಹಿ ಪಿಚ್ಗಳಿರುವುದು ವಾಡಿಕೆ. ಆದರೆ ಈ ಬಾರಿ ಬ್ಯಾಟ್ಸ್ಮನ್ಗಳಿಗೆ ಅನುಕೂಲಕರವಾಗುವಂತಹ ಪಿಚ್ ಸಿದ್ಧಪಡಿಸಲು ಸೂಚಿಸಲಾಗಿದೆ.
ಅದರಂತೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟ್ಸ್ಮನ್ಗಳ ಅಬ್ಬರ ಕಾಣಬಹುದು. ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯವನ್ನು ಐದು ದಿನದಾಟಗಳವರೆಗೆ ಕೊಂಡೊಯ್ಯಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.
ಆದರೆ ಇತ್ತ ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಅತ್ಯುತ್ತಮ ಫಾರ್ಮ್ನಲ್ಲಿದ್ದು, ಅವರೊಂದಿಗೆ ಜಸ್ಪ್ರೀತ್ ಬುಮ್ರಾ ಕೂಡ ನಿಖರ ದಾಳಿ ಸಂಘಟಿಸುತ್ತಿದ್ದಾರೆ. ಇವರೊಂದಿಗೆ ಅನುಭವಿ ಸ್ಪಿನ್ನರ್ಗಳಾದ ರವೀಂದ್ರ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಕಮಾಲ್ ಮಾಡುತ್ತಿದ್ದಾರೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟರ್ಗಳ ಟೀಮ್ ಇಂಡಿಯಾ ಬೌಲರ್ಗಳ ಮುಂದೆ ಸೆಟೆದು ನಿಲ್ಲಲಿದ್ದಾರಾ ಎಂಬುದೇ ಪ್ರಶ್ನೆ.
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.
ಇದನ್ನೂ ಓದಿ: ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ..!
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).
