ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಸತತ ಐದನೇ ಗೆಲುವನ್ನು ದಾಖಲಿಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ . ರೋಹಿತ್ ಪಡೆ ಈಗಾಗಲೇ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದು, ಇದೀಗ ಗೆಲುವಿನ ಸಿಕ್ಸರ್ ಬಾರಿಸಲು ಟೀಂ ಇಂಡಿಯಾ (Team India) ಸಜ್ಜಾಗಿದೆ. ಟೀಂ ಇಂಡಿಯಾದ ಮುಂದಿನ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಲಕ್ನೋ ತಲುಪಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ.
ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಮೂಲಗಳ ಪ್ರಕಾರ, ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ. ಹಾರ್ದಿಕ್ ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂದಿನ 2 ಪಂದ್ಯಗಳಲ್ಲಿ ಆಡುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಇದರಿಂದ ಟೀಂ ಇಂಡಿಯಾ ಟೆನ್ಷನ್ ಹೆಚ್ಚಾಗಿದೆ. ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಬೌಲಿಂಗ್ ವೇಳೆ ಗಾಯಗೊಂಡಿದ್ದರು.
IND vs ENG: ಇಂಗ್ಲೆಂಡ್ ವಿರುದ್ಧವೂ ಹಾರ್ದಿಕ್ ಪಾಂಡ್ಯ ಆಡುವುದು ಅನುಮಾನ..!
ಇದೀಗ ಹಾರ್ದಿಕ್ ಬೆಂಗಳೂರಿನ ಎನ್‌ಸಿಎಯಲ್ಲಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹಾರ್ದಿಕ್‌ಗೆ ಎನ್‌ಸಿಎಯಲ್ಲಿ ಪರೀಕ್ಷೆ ನಡೆಯಲಿದ್ದು, ಆ ಪರೀಕ್ಷೆಯ ನಂತರ ವೈದ್ಯರಿಂದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕವಷ್ಟೇ ಹಾರ್ದಿಕ್ ಲೀಗ್ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತದೆ. ಹೀಗಾಗಿ ಹಾರ್ದಿಕ್‌ಗೆ ಸಂಬಂಧಿಸಿದ ಮುಂದಿನ ಅಪ್‌ಡೇಟ್ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇನ್ನೂ 4 ಲೀಗ್ ಪಂದ್ಯಗಳನ್ನು ಆಡಬೇಕಿದೆ. ಟೀಂ ಇಂಡಿಯಾ ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧ, ನವೆಂಬರ್ 2 ರಂದು ಶ್ರೀಲಂಕಾ, ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ ಮತ್ತು ನವೆಂಬರ್ 12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ. ಸದ್ಯ ಟೀಂ ಇಂಡಿಯಾ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ