ಐಸಿಸಿ ಏಕದಿನ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲೂ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ.
ಏಷ್ಯಾಕಪ್ನಲ್ಲಿ ನೇಪಾಳ ಹಾಗೂ ಪಾಕಿಸ್ತಾನ್ ವಿರುದ್ಧ ಅರ್ಧಶತಕ ಬಾರಿಸಿದ ಗಿಲ್ ಇದೀಗ ಏಕದಿನ ಶ್ರೇಯಾಂಕದಲ್ಲಿ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಹಾಗೆಯೇ ಕಳೆದ ಬಾರಿ ಟಾಪ್-10 ರಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಈ ಸಲ ಎರಡು ಸ್ಥಾನ ಮೇಲೇರಿದ್ದಾರೆ. ಹಾಗೆಯೇ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ರೋಹಿತ್ ಶರ್ಮಾ ಕೂಡ ಯಶಸ್ವಿಯಾಗಿದ್ದಾರೆ.
ಹೊಸ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಭಾರತದ ಐವರು ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಾಪ್-10 ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರು ಆಟಗಾರರು ಸ್ಥಾನ ಪಡೆದರೆ, ಬೌಲರ್ಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.
ಐಸಿಸಿ ಬೌಲರ್ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬೌಲರ್ಗಳು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ 7ನೇ ಸ್ಥಾನ ಅಲಂಕರಿಸಿದ್ದಾರೆ.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ್ದ ಕುಲ್ದೀಪ್ ಯಾದವ್ ಶ್ರೀಲಂಕಾ ವಿರುದ್ಧ 4 ವಿಕೆಟ್ ಪಡೆದಿದ್ದರು. ಈ ಅದ್ಭುತ ಪ್ರದರ್ಶನದೊಂದಿಗೆ ಎಡಗೈ ಸ್ಪಿನ್ನರ್ ಟಾಪ್-10 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಳೆದ ಬಾರಿಯ ಶ್ರೇಯಾಂಕವನ್ನು ಕಾಯ್ದುಕೊಂಡಿದ್ದಾರೆ.