IND vs AUS, 1st T20I: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ (KL Rahul) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್ನೊಂದಿಗೆ 55 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ 2ನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಕೆಎಲ್ಆರ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಕೇವಲ 56 ಇನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ 2 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಕೆಎಲ್ ರಾಹುಲ್ 58 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 2 ಸಾವಿರ ರನ್ ಬಾರಿಸಿದ 3ನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನೂ ಕೂಡ ಬರೆದರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಾತ್ರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಈ ಸಾಧನೆ ಮಾಡಿದ್ದರು.
ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ವಿಶ್ವದ ನಾಲ್ಕನೇ ಬ್ಯಾಟ್ಸ್ಮನ್ ಎಂಬ ಹಿರಿಮೆಗೂ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ. ಸದ್ಯ ಅತೀ ವೇಗವಾಗಿ 2 ಸಾವಿರ ರನ್ ಬಾರಿಸಿದ ದಾಖಲೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (52) ಹಾಗೂ ಮೊಹಮ್ಮದ್ ರಿಜ್ವಾನ್ (52) ಹೆಸರಿನಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (56) ಇದ್ದು, ನಾಲ್ಕನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು. ಆದರೆ 11 ರನ್ಗಳಿಸಿದ್ದ ವೇಳೆ ಹಿಟ್ಮ್ಯಾನ್ ಕ್ಯಾಚ್ ನೀಡಿ ಹೊರನಡೆಯಬೇಕಾಯಿತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (2) ಕೂಡ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಪ್ರದರ್ಶಿಸಿದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೆಎಲ್ ರಾಹುಲ್ಗೆ ಉತ್ತಮ ಸಾಥ್ ನೀಡಿದ ಸೂರ್ಯ ಕುಮಾರ್ ಯಾದವ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.
ಆದರೆ ಅರ್ಧಶತಕದ ಬೆನ್ನಲ್ಲೇ ಕೆಎಲ್ ರಾಹುಲ್ (55) ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್ ಬಾರಿಸಿ ಗಮನ ಸೆಳೆದರು. ಇದಾಗ್ಯೂ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೂರ್ಯಕುಮಾರ್ ಯಾದವ್ 4 ಸಿಕ್ಸ್ನೊಂದಿಗೆ 25 ಎಸೆತಗಳಲ್ಲಿ 45 ರನ್ ಬಾರಿಸಿದರು. ಆದರೆ ಹಾಫ್ ಸೆಂಚುರಿ ಹೊಸ್ತಿಲ್ಲಲಿ ಕೀಪರ್ಗೆ ಕ್ಯಾಚ್ ನೀಡಿದರು.
5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ ಅಕ್ಷರಶಃ ಅಬ್ಬರಿಸಿದರು. ಆಸೀಸ್ ಬೌಲರ್ಗಳ ಬೆಂಡೆತ್ತಿದ ಪಾಂಡ್ಯ ಕೇವಲ 25 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಅಷ್ಟೇ ಅಲ್ಲದೆ 5 ಸಿಕ್ಸ್ ಹಾಗೂ 7 ಫೋರ್ನೊಂದಿಗೆ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಬಾರಿಸುವ ಮೂಲಕ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತವನ್ನು 208 ಕ್ಕೆ ತಂದು ನಿಲ್ಲಿಸಿದರು.
209 ರನ್ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾಗೆ ಆರೋನ್ ಫಿಂಚ್ ಹಾಗೂ ಕ್ಯಾಮರೋನ್ ಗ್ರೀನ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 39 ರನ್ಗಳ ಜೊತೆಯಾಟವಾಡಿದ ಈ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಫಿಂಚ್ (22) ಔಟಾದ ಬೆನ್ನಲ್ಲೇ ಅಬ್ಬರಿಸಲಾರಂಭಿಸಿದ ಕ್ಯಾಮರೋನ್ ಗ್ರೀನ್ ಟೀಮ್ ಇಂಡಿಯಾ ಬೌಲರ್ಗಳನ್ನು ದಂಡಿಸಿದರು. ಈ ನಡುವೆ ಅಕ್ಷರ್ ಪಟೇಲ್ ಕೈಬಿಟ್ಟ ಕ್ಯಾಚ್ನ ಸಂಪೂರ್ಣ ಲಾಭ ಪಡೆದ ಗ್ರೀನ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್ನೊಂದಿಗೆ 61 ರನ್ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಆಸ್ಟ್ರೇಲಿಯಾ ಮೊತ್ತವು 10 ಓವರ್ಗಳಲ್ಲಿ 100 ರ ಗಡಿದಾಟಿತ್ತು.
ಇದಾಗ್ಯೂ ಕೊನೆಯ 6 ಓವರ್ಗಳಲ್ಲಿ ಆಸ್ಟ್ರೇಲಿಯಾಗೆ 64 ರನ್ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದಿದ್ದ ಎಡಗೈ ದಾಂಡಿಗ ಮ್ಯಾಥ್ಯೂವೇಡ್ 21 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ನೊಂದಿಗೆ ಅಜೇಯ 45 ರನ್ ಚಚ್ಚಿದರು. ವೇಡ್ಗೆ ಉತ್ತಮ ಸಾಥ್ ನೀಡಿದ ಟಿಮ್ ಡೇವಿಡ್ 14 ಎಸೆತಗಳಲ್ಲಿ 18 ರನ್ ಬಾರಿಸಿದರು. ಅದರಂತೆ ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 19.2 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್ ಬಾರಿಸಿ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
Published On - 11:25 am, Wed, 21 September 22