IND vs AUS: ನಿರ್ಣಾಯಕ ಇನಿಂಗ್ಸ್ನಲ್ಲಿ ಕೈಕೊಟ್ಟ ಕೆಎಲ್ ರಾಹುಲ್
India vs Australia: ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ (140) ಭರ್ಜರಿ ಶತಕ ಸಿಡಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಪೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ (114) ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಸೆಂಚುರಿ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಸಿ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾದ ದ್ವಿತೀಯ ಇನಿಂಗ್ಸ್ ಬ್ಯಾಟಿಂಗ್ ನಡೆಯುತ್ತಿದೆ.
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದರು. ಪರ್ತ್, ಅಡಿಲೇಡ್ ಹಾಗೂ ಬ್ರಿಸ್ಬೇನ್ನಲ್ಲೂ ಆರಂಭಿಕನಾಗಿ ರಾಹುಲ್ ಉತ್ತಮ ಪ್ರದರ್ಶನವನ್ನೇ ನೀಡಿದ್ದರು. ಆದರೆ ಮೆಲ್ಬೋರ್ನ್ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಪರಿಣಾಮ ರಾಹುಲ್ 3ನೇ ಕ್ರಮಾಂಕದಲ್ಲಿ ಆಡಬೇಕಾಯಿತು.
ಇದಾಗ್ಯೂ ಮೊದಲ ಇನಿಂಗ್ಸ್ನಲ್ಲಿ 24 ರನ್ ಬಾರಿಸಿದ್ದರು. ಆದರೆ ನಿರ್ಣಾಯಕವಾಗಿರುವ 5ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿದ್ದಾರೆ.
ಪ್ಯಾಟ್ ಕಮಿನ್ಸ್ ಎಸೆದ ಬೌನ್ಸಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕೆಎಲ್ ರಾಹುಲ್ ಸ್ಲಿಪ್ನಲ್ಲಿದ್ದ ಉಸ್ಮಾನ್ ಖ್ವಾಜಾಗೆ ಕ್ಯಾಚಿತ್ತು ನಿರ್ಗಮಿಸಿದ್ದಾರೆ. ಈ ಮೂಲಕ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಇನಿಂಗ್ಸ್ನಲ್ಲಿ ರನ್ ಖಾತೆ ತೆರೆಯುವಲ್ಲಿ ಕನ್ನಡಿಗ ವಿಫಲನಾಗಿದ್ದಾನೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್ ಗಳಿಸಿತು. 105 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 234 ರನ್ಗಳಿಸಿ ಆಲೌಟ್ ಆಗಿದೆ.
ಅದರಂತೆ ಇದೀಗ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 340 ರನ್ಗಳ ಗುರಿ ಪಡೆದುಕೊಂಡಿದೆ. ಈ ಗುರಿಯನ್ನು ಬೆನ್ನತ್ತುತ್ತಿರುವ ಟೀಮ್ ಇಂಡಿಯಾ 22 ಓವರ್ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 30 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.