IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಖಚಿತ
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳಿಂದ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಗೆಲುವು ದಾಖಲಿಸಿ ಸಮಬಲ ಸಾಧಿಸಿದ್ದರು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಎರಡೂ ತಂಡಗಳು ನಾಲ್ಕನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4ನೇ ಮ್ಯಾಚ್ ಗುರುವಾರದಿಂದ (ಡಿ.26) ಶುರುವಾಗಲಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಮೂರು ಮ್ಯಾಚ್ಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ವೇಗಿಗಳು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮೆಲ್ಬೋರ್ನ್ನಲ್ಲಿ ಹೆಚ್ಚುವರಿ ಸ್ಪಿನ್ ಆಲ್ರೌಂಡರ್ನನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು. ಹಾಗೆಯೇ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮುಂದುವರೆಯಬಹುದು.
ಇನ್ನು ಈ ಪಂದ್ಯದಲ್ಲೂ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಐದನೇ ಸ್ಥಾನದಲ್ಲಿ ರಿಷಭ್ ಪಂತ್ ಆಡಿದರೆ, ಆರನೇ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ….
- ಯಶಸ್ವಿ ಜೈಸ್ವಾಲ್
- ಕೆಎಲ್ ರಾಹುಲ್
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ರಿಷಭ್ ಪಂತ್
- ರೋಹಿತ್ ಶರ್ಮಾ
- ರವೀಂದ್ರ ಜಡೇಜಾ
- ವಾಷಿಂಗ್ಟನ್ ಸುಂದರ್
- ಜಸ್ಪ್ರೀತ್ ಬುಮ್ರಾ
- ಆಕಾಶ್ ದೀಪ್
- ಮೊಹಮ್ಮದ್ ಸಿರಾಜ್.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.
ನಿರ್ಣಾಯಕ ಪಂದ್ಯ:
ಮೆಲ್ಬೋರ್ನ್ ಟೆಸ್ಟ್ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ.
ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!
ಇದೀಗ ನಾಲ್ಕನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಸೋಲನ್ನು ತಪ್ಪಿಸಿಕೊಳ್ಳಲಿದೆ. ಅಂದರೆ ನಾಲ್ಕನೇ ಪಂದ್ಯದಲ್ಲಿ ಗೆದ್ದ ತಂಡ ಐದನೇ ಪಂದ್ಯದ ಮೂಲಕ ಸರಣಿ ಜಯಿಸಬಹುದು ಅಥವಾ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಬಹುದು. ಹೀಗಾಗಿ ಉಭಯ ತಂಡಗಳ ಪಾಲಿಗೆ ಮೆಲ್ಬೋರ್ನ್ ಟೆಸ್ಟ್ ಮ್ಯಾಚ್ ನಿರ್ಣಾಯಕವಾಗಿ ಮಾರ್ಪಟ್ಟಿದೆ.