IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ..!

|

Updated on: Oct 10, 2024 | 10:44 PM

Rohit Sharma: ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯ ಮೊದಲ ಅಥವಾ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯಬಹುದು ಎಂದು ವರದಿಯಾಗಿದೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರೋಹಿತ್ ಬಿಸಿಸಿಐಗೆ ಈ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ..!
ರೋಹಿತ್ ಶರ್ಮಾ
Follow us on

ಪ್ರಸ್ತುತ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಆ ಬಳಿಕ ನ್ಯೂಜಿಲೆಂಡ್ ತಂಡಕ್ಕೆ ಆತಿಥ್ಯವಹಿಸಲಿದೆ. ಈ ಸರಣಿ ಮುಗಿದ ನಂತರ ಟೀಂ ಇಂಡಿಯಾ ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲ್ಲಿದೆ. ಆದರೆ ಈ ಸರಣಿ ಆರಂಭವಾಗುವ ಮುನ್ನವೇ ಭಾರತ ತಂಡದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದ್ದು, ಈ ಸರಣಿಯ ಮೊದಲ ಅಥವಾ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯಬಹುದು ಎಂದು ವರದಿಯಾಗಿದೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರೋಹಿತ್ ಬಿಸಿಸಿಐಗೆ ಈ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇತ್ತೀಚೆಗಷ್ಟೇ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಬಹುಶಃ ಈ ಕಾರಣದಿಂದ ರೋಹಿತ್ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ಮುಗಿದ ಕೂಡಲೇ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಅಕ್ಟೋಬರ್ 16 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದ್ದು, ಇದರಲ್ಲಿ 3 ಪಂದ್ಯಗಳು ನಡೆಯಲಿವೆ. ಆ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭವಾಗಲಿದೆ. ಭಾರತ ತಂಡ ಕಳೆದ ಎರಡು ಆವೃತ್ತಿಗಳಲ್ಲೂ ಆಸ್ಟ್ರೇಲಿಯಾವನ್ನು ಮಣಿಸಿದೆ. ಈ ಬಾರಿ ಸರಣಿಯಲ್ಲಿ 4ರ ಬದಲಿಗೆ 5 ಟೆಸ್ಟ್ ಪಂದ್ಯಗಳು ನಡೆಯಬೇಕಿದ್ದು, ಈ ಪಂದ್ಯಗಳಲ್ಲಿ ಒಂದರಲ್ಲಿ ಟೀಂ ಇಂಡಿಯಾ ತನ್ನ ಸ್ಟಾರ್ ಕ್ಯಾಪ್ಟನ್ ಇಲ್ಲದೆ ಆಡಬೇಕಾಗಬಹುದು.

ಬಿಸಿಸಿಐಗೆ ರೋಹಿತ್ ಹೇಳಿದ್ದೇನು?

ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಬಗ್ಗೆ ರೋಹಿತ್ ಈಗಾಗಲೇ ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಸರಣಿಯ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್‌ನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ಆರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಮೊದಲ ಅಥವಾ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದು. ವರದಿಯ ಪ್ರಕಾರ ರೋಹಿತ್ ತುರ್ತು ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಆದರೆ, ಈ ವೈಯಕ್ತಿಕ ವಿಚಾರ ಟೆಸ್ಟ್ ಸರಣಿಗೂ ಮುನ್ನವೇ ಬಗೆಹರಿದರೆ, ಆಗ ರೋಹಿತ್ ಎಲ್ಲಾ 5 ಟೆಸ್ಟ್ ಪಂದ್ಯಗಳನ್ನು ಆಡಬಹುದು ಎಂದೂ ಹೇಳಲಾಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಮಂಡಳಿಗೆ ಸ್ಪಷ್ಟನೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ರೋಹಿತ್ ಎರಡನೇ ಬಾರಿ ತಂದೆಯಾಗಲಿದ್ದಾರಾ?

ರೋಹಿತ್ ನೀಡಿರುವ ವೈಯಕ್ತಿಕ ಕಾರಣ ಏನು ಎಂಬುದು ಸದ್ಯಕ್ಕೆ ವರದಿಯಲ್ಲಿ ಸ್ಪಷ್ಟವಾಗಿಲ್ಲ. ಆದರೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಎರಡನೇ ಮಗುವಿನ ಆಗಮನವಾಗಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇದರಿಂದಾಗಿ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯಬಹುದು ಎಂದು ವದಂತಿ ಹಬ್ಬಿಸಲಾಗಿದೆ. ಆದರೆ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಹೊರಗುಳಿಯಬಹುದು ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಭಾರತದ ಕೊನೆಯ ಆಸ್ಟ್ರೇಲಿಯಾ ಪ್ರವಾಸದಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. 2020-21ರಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಆಗ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಅಡಿಲೇಡ್‌ನಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದ ನಂತರ ಸರಣಿಯಿಂದ ಹೊರಗುಳಿದಿದ್ದರು. ಏಕೆಂದರೆ ಆ ಸಮಯದಲ್ಲಿ ಕೊಹ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಇದರಿಂದಾಗಿ ಕೊಹ್ಲಿಗೆ ಸರಣಿಯ ಉಳಿದ 3 ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ