
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯನ್ನು ಆತಿಥೇಯ ಟೀಂ ಇಂಡಿಯಾ 4-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಈ ಸರಣಿಗೆ ಅಂತ್ಯ ಹಾಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐದನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ, ಬಲಿಷ್ಠ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 150 ರನ್ಗಳಿಂದ ಮಣಿಸಿ ತನ್ನ ಅಜೇಯ ಸರಣಿ ಗೆಲುವಿನ ಓಟವನ್ನು ಮುಂದುವರೆಸಿತು. ಇತ್ತ ಟಿ20 ಸರಣಿಯನ್ನು ಗೆದ್ದು ಭಾರತದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕುವ ಸಲುವಾಗಿ ಭಾರತಕ್ಕೆ ಬಂದಿದ್ದ ಇಂಗ್ಲೆಂಡ್, ಟಿ20 ಸರಣಿಯಲ್ಲಿ ಹೀನಾಯ ಸೋಲು ಕಂಡಿದೆ. ಹೀಗಾಗಿ ಟಿ20 ಸರಣಿಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿರುವ ಇಂಗ್ಲೆಂಡ್ಗೆ ಇನ್ನು ಕೆಲವೇ ದಿನಗಳಲ್ಲಿ ಸುವರ್ಣಾವಕಾಶವಿದೆ.
ಹೌದು… ಭಾರತ ಹಾಗೂ ಇಂಗ್ಲೆಂಡ್ ನಡುವೆ ಇದೇ ಫೆಬ್ರವರಿ 6 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ತಂಡದ ಅನುಭವಿ ಹಾಗೂ ಸ್ಟಾರ್ ಆಟಗಾರರು ಮತ್ತೊಮ್ಮೆ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಆಡಿದ್ದ ಕೊನೆಯ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದ ಭಾರತ ಏಕದಿನ ತಂಡ ಇದೀಗ ಸರಣಿ ಗೆಲುವಿನೊಂದಿಗೆ ಈ ವರ್ಷವನ್ನು ಆರಂಭಿಸಲು ಎದುರು ನೋಡುತ್ತಿದೆ. ಇತ್ತ ಇಂಗ್ಲೆಂಡ್ ಕೂಡ ಏಕದಿನ ಸರಣಿಯನ್ನು ಗೆದ್ದುಕೊಳ್ಳುವ ಮೂಲಕ ಭಾರತ ಪ್ರವಾಸವನ್ನು ಅಂತ್ಯಗೊಳಿಸಲು ಪ್ರಯತ್ನಿಸಲಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿ ಫೆಬ್ರವರಿ 6 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಫೆಬ್ರವರಿ 6 ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ನಾಗ್ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇದಲ್ಲದೆ, ಎರಡನೇ ಪಂದ್ಯವು ಫೆಬ್ರವರಿ 9 ರಂದು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಪಂದ್ಯ ಫೆಬ್ರವರಿ 12 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:30 ರಿಂದ ಆರಂಭವಾಗಲಿವೆ.
ಏಕದಿನ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದಲ್ಲದೆ, ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿರುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್. (ವಿಕೆಟ್ ಕೀಪರ್) ಮತ್ತು ರವೀಂದ್ರ ಜಡೇಜಾ.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಓವರ್ಟನ್, ಜೋಸ್ ಬಟ್ಲರ್, ಜೇಮೀ ಸ್ಮಿತ್, ಫಿಲಿಪ್ ಸಾಲ್ಟ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ