India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಜುಲೈ 27 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವುದು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ತಂಡದಲ್ಲಿ ಮೂವರು ಆರಂಭಿಕ ಬ್ಯಾಟರ್ಗಳು ಸ್ಥಾನ ಪಡೆದಿದ್ದು, ಇದೀಗ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲು ಯುವ ಆಟಗಾರ ನಡುವೆ ಪೈಪೋಟಿ ಏರ್ಪಟ್ಟಿದೆ.
ಪ್ರಸ್ತುತ ಭಾರತ ಏಕದಿನ ತಂಡದಲ್ಲಿ ಮೂವರು ಆರಂಭಿಕ ಆಟಗಾರರು ಸ್ಥಾನ ಪಡೆದಿದ್ದಾರೆ. ಇಲ್ಲಿ ನಾಯಕ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸುವುದು ಖಚಿತ. ಆದರೆ ಮತ್ತೊಂದೆಡೆ ಕಣಕ್ಕಿಳಿಯುವುದು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ತಂಡದಲ್ಲಿ ಆರಂಭಿಕರಾಗಿ ಶುಭ್ಮನ್ ಗಿಲ್, ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ಸ್ಥಾನ ಪಡೆದಿದ್ದಾರೆ. ಇಲ್ಲಿ ದ್ವಿಶತಕಗಳನ್ನು ಸಿಡಿಸುವ ಮೂಲಕ ಇಶಾನ್ ಕಿಶನ್ ಹಾಗೂ ಶುಭ್ಮನ್ ಗಿಲ್ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ರುತುರಾಜ್ ಅವಕಾಶ ವಂಚಿತರಾಗುವುದು ಖಚಿತ ಎನ್ನಬಹುದು.
ಆದರೆ ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬುದೇ ಈಗ ಕುತೂಹಲ. ಏಕೆಂದರೆ ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಕೋಟದಲ್ಲಿ ಆಯ್ಕೆ ಮಾಡಿದರೆ ಸಂಜು ಸ್ಯಾಮ್ಸನ್ಗೆ ಚಾನ್ಸ್ ಕೈ ತಪ್ಪಲಿದೆ. ಹೀಗಾಗಿ ಶುಭ್ಮನ್ ಗಿಲ್ ಅವರೊಂದಿಗೆ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ಮತ್ತೊಂದೆಡೆ ಟೆಸ್ಟ್ ಕ್ರಿಕೆಟ್ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಸಿಡಿಸಿರುವ ಇಶಾನ್ ಕಿಶನ್ ಅವರ ಫಾರ್ಮ್ ಕೂಡ ಇಲ್ಲಿ ಪರಿಗಣಿಸಬೇಕಾಗುತ್ತದೆ. ಹಾಗಾಗಿ ಆಡುವ ಬಳಗವನ್ನು ಆಯ್ಕೆ ಮಾಡುವುದೇ ನಾಯಕ ಹಾಗೂ ಕೋಚ್ ಮುಂದಿರುವ ದೊಡ್ಡ ಸವಾಲು.
ಇದನ್ನೂ ಓದಿ: ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ್ದು ಯಾರು ಗೊತ್ತಾ?
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.