
ಇಂಗ್ಲೆಂಡ್-ಭಾರತ ನಡುವಣ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ ಶುರುವಾಗಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್, ಟೀಮ್ ಇಂಡಿಯಾವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಕೆಎಲ್ ರಾಹುಲ್ ಕೇವಲ 2 ರನ್ಗಳಿಸಿ ಔಟಾದರು.
ಇದಾದ ಬಳಿಕ ಮೂರನೇ ಕ್ರಮಾಂಕದಲ್ಲಿ ಕರುಣ್ ನಾಯರ್ ಕಣಕ್ಕಿಳಿದರು. ವಿಶೇಷ ಎಂದರೆ ಕಳೆದ ಪಂದ್ಯದಲ್ಲಿ ಕರುಣ್ ಆಡಿದ್ದು 6ನೇ ಕ್ರಮಾಂಕದಲ್ಲಿ. ಈ ಬಾರಿ ಅವರಿಗೆ ಮುಂಬಡ್ತಿ ನೀಡಲಾಗಿದೆ.
ಕಳೆದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದ ಸಾಯಿ ಸುದರ್ಶನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡಲಾಗಿದ್ದು, ಹೀಗಾಗಿ ಕರುಣ್ ನಾಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಟೀಮ್ ಇಂಡಿಯಾ ಕಳೆದ 7 ಟೆಸ್ಟ್ ಪಂದ್ಯಗಳಲ್ಲಿ ಐವರು ಬ್ಯಾಟರ್ಗಳನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿರುವುದು. ಅಂದರೆ ಸ್ಥಿರವಾಗಿ ಯಾವುದೇ ಬ್ಯಾಟ್ಸ್ಮನ್ಗೆ 3ನೇ ಕ್ರಮಾಂಕದಲ್ಲಿ ಅವಕಾಶ ನೀಡಿಲ್ಲ ಎಂಬುದು.
ಇತ್ತ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಮೊದಲ ಇನಿಂಗ್ಸ್ನಲ್ಲಿ 31 ರನ್ ಬಾರಿಸಿ ಔಟಾಗಿದ್ದಾರೆ. ಇನ್ನು ದ್ವಿತೀಯ ಇನಿಂಗ್ಸ್ನಲ್ಲೂ ಅವರು ವಿಫಲರಾದರೆ, ಮತ್ತೆ ಮೂರನೇ ಕ್ರಮಾಂಕದ ಬ್ಯಾಟರ್ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಇದನ್ನೂ ಓದಿ: IPL 2026: CSK ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಬಹುತೇಕ ಖಚಿತ
ಒಟ್ಟಿನಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಈ ಪ್ರಯೋಗವು ಇದೀಗ ಚರ್ಚೆಗೀಡಾಗಿದ್ದು, ಟೀಮ್ ಇಂಡಿಯಾದಲ್ಲಿ ಏನಾಗ್ತಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.