
ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಹಾಗೂ ವಿರಾಟ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಭಾರತದ ಪರ ಯಾವುದೇ ಪಂದ್ಯವಾಡಿರಲಿಲ್ಲ. ಇದೀಗ ಆರು ತಿಂಗಳುಗಳ ಬಳಿಕ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯಲು ಅಣಿಯಾಗಿದ್ದಾರೆ.
ಇನ್ನು ಈ ಸರಣಿಗಾಗಿ ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ತಂಡದಲ್ಲಿದ್ದು, ಹೆಚ್ಚುವರಿ ಕೀಪರ್ ಸ್ಥಾನದಲ್ಲಿ ಧ್ರುವ್ ಜುರೆಲ್ಗೆ ಅವಕಾಶ ನೀಡಲಾಗಿದೆ.
ಇನ್ನುಳಿದಂತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಸರಣಿಗೆ ಭಾರತ ಏಕದಿನ ತಂಡ ಈ ಕೆಳಗಿನಂತಿದೆ…
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿದ ತಂಡವನ್ನೇ ಈ ಟೂರ್ನಿಗಾಗಿ ಮುಂದುವರೆಸಲಾಗಿದೆ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
ಇದನ್ನೂ ಓದಿ: T20 World Cup 2026: ಟಿ20 ವಿಶ್ವಕಪ್ಗೆ 17 ತಂಡಗಳು ಎಂಟ್ರಿ
Published On - 2:49 pm, Sat, 4 October 25