ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ. ಇದಾಗ್ಯೂ ಅವರು ಇಡೀ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.
ಏಕೆಂದರೆ ಬೆನ್ನು ನೋವಿನಿಂದ ಬಳಲುತ್ತಿರುವ ಜಸ್ಪ್ರೀತ್ ಬುಮ್ರಾಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮೊದಲ ಮೂರು ಪಂದ್ಯಗಳಲ್ಲಿ ಬುಮ್ರಾ ಕಣಕ್ಕಿಳಿಯದಿದ್ದರೂ ಅಚ್ಚರಿಪಡಬೇಕಿಲ್ಲ.
ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅರ್ಷದೀಪ್ ಸಿಂಗ್ಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಲಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಶಮಿ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಚಾಂಪಿಯನ್ಸ್ ಟ್ರೋಫಿಗಾಗಿಯೂ ಮೊಹಮ್ಮದ್ ಶಮಿ ಅವರಿಗೆ ಸ್ಥಾನ ನೀಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
ಇದನ್ನೂ ಓದಿ: Karun Nair: ಕರುಣ್ ನಾಯರ್ ಮೇಲೆ ಕರುಣೆ ತೋರದ ಬಿಸಿಸಿಐ
Published On - 2:57 pm, Sat, 18 January 25