ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ
ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಏಕದಿನ ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಳಗದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಇದೀಗ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಇದಾಗ್ಯೂ ಅವರು ಏಷ್ಯಾಕಪ್ ತಂಡದಿಂದ ಹೊರಬಿದ್ದಿಲ್ಲ. ಆದರೆ ಏಕದಿನ ವಿಶ್ವಕಪ್ಗೂ ಮುನ್ನ ಅವರು ಸಂಪೂರ್ಣ ಚೇತರಿಸಿಕೊಳ್ಳದಿದ್ದರೆ ಟೀಮ್ನಿಂದ ಹೊರಬೀಳುವುದು ಖಚಿತ.
ಏಕೆಂದರೆ ಏಕದಿನ ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಬೀತುಪಡಿಸಬೇಕಾಗಿ ಬರಬಹುದು.
ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ. 3 ಪಂದ್ಯಗಳ ಈ ಸರಣಿಯು ಸೆಪ್ಟೆಂಬರ್ 27 ರಂದು ಕೊನೆಗೊಳ್ಳಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನಾಡಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಶ್ರೇಯಸ್ ಅಯ್ಯರ್ ಅವರ ಏಕದಿನ ವಿಶ್ವಕಪ್ ಭವಿಷ್ಯ ಕೂಡ ನಿರ್ಧಾರವಾಗಬಹುದು.
ವಿಶ್ವಕಪ್ ತಂಡದಲ್ಲಿ ಬದಲಾವಣೆಗೆ ಅವಕಾಶ:
ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಇದಾದ ಬಳಿಕ ಗಾಯದ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಗಾಗಿ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಈ ರೀತಿಯ ಬದಲಾವಣೆಗೂ ಮುನ್ನ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕು. ಹೀಗಾಗಿ ಅಂತಿಮ ಕ್ಷಣದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.
ಇದನ್ನೂ ಓದಿ: Rohit Sharma: ಏಷ್ಯಾಕಪ್ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಕಿಂಗ್
ಏಕದಿನ ವಿಶ್ವಕಪ್ ಯಾವಾಗ ಶುರು?
ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
ಏಕದಿನ ವಿಶ್ವಕಪ್ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.