IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ: ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ
India vs Australia, 1st Semi-Final: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಒಟ್ಟು 151 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 57 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಇದೀಗ ಉಭಯ ತಂಡಗಳು ದುಬೈ ಸ್ಟೇಡಿಯಂನಲ್ಲಿ ಕಣಕ್ಕಿಳಿದಿವೆ.

ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಂದರೆ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿದ ಆಡುವ ಬಳಗವನ್ನೇ ಈ ಮ್ಯಾಚ್ನಲ್ಲೂ ಮುಂದುವರೆಸಲಾಗಿದೆ.
ಅತ್ತ ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ಶಾರ್ಟ್ ಬದಲಿಗೆ ಈ ಬಾರಿ ಆರಂಭಿಕನಾಗಿ ಕೂಪರ್ ಕೊನೊಲಿಯನ್ನು ಕಣಕ್ಕಿಳಿಸಿದ್ದಾರೆ. ಅಲ್ಲದೆ ಸ್ಪೆನ್ಸರ್ ಜಾನ್ಸನ್ ಬದಲಿಗೆ ಸ್ಪಿನ್ನರ್ ತನ್ವೀರ್ ಸಂಘ ಅವರಿಗೆ ಚಾನ್ಸ್ ನೀಡಲಾಗಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಕೂಪರ್ ಕೊನೊಲಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡ್ವಾರ್ಷಿಯಸ್, ನಾಥನ್ ಎಲ್ಲಿಸ್, ಆ್ಯಡಂ ಝಂಪಾ, ತನ್ವೀರ್ ಸಂಘ.
ಉಭಯ ತಂಡಗಳ ಮುಖಾಮುಖಿ:
ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಒಟ್ಟು 151 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 57 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಈ ಅಂಕಿ ಅಂಶಗಳ ಪ್ರಕಾರ ಆಸ್ಟ್ರೇಲಿಯಾ ತಂಡವೇ ಮೇಲುಗೈ ಹೊಂದಿದೆ.
ಆದರೆ ಈ ಬಾರಿ ಆಸ್ಟ್ರೇಲಿಯಾ ತಂಡದಲ್ಲಿ ಪ್ರಮುಖ ಆಟಗಾರರಾದ ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಝಲ್ವುಡ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಶಾರ್ಟ್ ಹಾಗೂ ಮಿಚೆಲ್ ಮಾರ್ಷ್ ಇಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಬಲಿಷ್ಠತೆಯ ವಿಷಯದಲ್ಲಿ ಆಸೀಸ್ ಪಡೆಗಿಂತ ಟೀಮ್ ಇಂಡಿಯಾ ಮುಂದಿದೆ. ಹಾಗಾಗಿ ದುಬೈ ಪಿಚ್ನಲ್ಲಿ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.
Published On - 2:06 pm, Tue, 4 March 25
