ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಗುರುವಾರದಿಂದ (ಸೆ.19) ಆರಂಭವಾಗಲಿರುವ ಈ ಸರಣಿಯು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬೇಕಿದ್ದರೆ ಭಾರತ ತಂಡವು ಈ ಸರಣಿಯನ್ನು ಗೆಲ್ಲಲೇಬೇಕು. ಅತ್ತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿರಬೇಕಿದ್ದರೆ ಬಾಂಗ್ಲಾದೇಶ್ ತಂಡಕ್ಕೆ ಗೆಲುವು ಅನಿವಾರ್ಯ. ಹೀಗಾಗಿ ಈ ಸರಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಅಂಕಿ ಅಂಶಗಳ ಪ್ರಕಾರ ಇಲ್ಲಿ ಭಾರತ ತಂಡವೇ ಬಲಿಷ್ಠ. ಏಕೆಂದರೆ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ ಒಟ್ಟು 13 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಅತ್ತ ಬಾಂಗ್ಲಾದೇಶ್ ತಂಡವು ಒಮ್ಮೆಯೂ ಭಾರತದ ವಿರುದ್ಧ ಟೆಸ್ಟ್ ಪಂದ್ಯ ಗೆದ್ದಿಲ್ಲ. ಇದಾಗ್ಯೂ 2 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಭಾರತದ ವಿರುದ್ಧ ಸರಣಿ ಡ್ರಾ ಮಾಡಿಕೊಳ್ಳಲು ಸಾಧ್ಯವಾದರೆ ಅದು ಬಾಂಗ್ಲಾದೇಶ್ ತಂಡದ ಶ್ರೇಷ್ಠ ಸಾಧನೆಯಾಗಲಿದೆ.
ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಕೊನೆಯ ಟೆಸ್ಟ್ ಸರಣಿ ಆಡಿದ್ದು 2022 ರಲ್ಲಿ. ಎರಡು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಗೆದ್ದುಕೊಂಡಿತ್ತು.
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯಾಂಶವೆಂದರೆ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿರುವುದು. ಅಂದರೆ ಬಾಂಗ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 227 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 314 ರನ್ಗೆ ಆಲೌಟ್ ಆಗಿತ್ತು.
ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಬಾಂಗ್ಲಾದೇಶ್ ತಂಡವು 231 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 145 ರನ್ಗಳ ಗುರಿ ಮುಟ್ಟಲು ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡಿತು. ಈ ಮೂಲಕ 3 ವಿಕೆಟ್ಗಳ ರೋಚಕ ಜಯ ಸಾಧಿಸಿತ್ತು. ಹೀಗಾಗಿ ಈ ಸರಣಿಯಲ್ಲೂ ಬಾಂಗ್ಲಾ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಬಾಂಗ್ಲಾದೇಶ್ ಟೆಸ್ಟ್ ತಂಡ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.
ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.
Published On - 11:38 am, Tue, 17 September 24