
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ (Team India) 436 ರನ್ಗಳಿಸಿ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು ಉತ್ತಮ ಪಡೆದಿರಲಿಲ್ಲ. ಬಾಝ್ಬಾಲ್ ತಂತ್ರದೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾದ ಸ್ಪಿನ್ನರ್ಗಳು ಆಘಾತದ ಮೇಲೆ ಆಘಾತ ನೀಡಿದ್ದರು. ಪರಿಣಾಮ 125 ರನ್ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ 88 ಎಸೆತಗಳಲ್ಲಿ 70 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡವು 246 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.
ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕ ಆಟಗಾರ ರೋಹಿತ್ ಶರ್ಮಾ (24) ಬೇಗನೆ ಔಟಾದರೂ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜೈಸ್ವಾಲ್ 74 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 80 ರನ್ ಬಾರಿಸಿದ್ದರು.
ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಶ್ರೇಯಸ್ ಅಯ್ಯರ್ (35) ಜೊತೆಗೂಡಿ ಇನಿಂಗ್ಸ್ ಕಟ್ಟಿದ ರಾಹುಲ್ 123 ಎಸೆತಗಳಲ್ಲಿ 86 ರನ್ ಬಾರಿಸಿ ಶತಕ ವಂಚಿತರಾದರು.
ಇನ್ನು ಶ್ರೀಕರ್ ಭರತ್ 41 ರನ್ಗಳ ಕೊಡುಗೆ ನೀಡಿದರೆ, ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಬಾರಿಸಿದರು. ಆದರೆ ಮೂರನೇ ದಿನದಾಟದ ಆರಂಭದಲ್ಲೇ ಜಡೇಜಾ (87) ಜೋ ರೂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದರು. ಇದರೊಂದಿಗೆ ಜಡ್ಡು ಕೂಡ ಶತಕ ವಂಚಿತರಾಗಿ ಪೆವಿಲಿಯನ್ಗೆ ಹಿಂತಿರುಗಿದರು. ಆ ಬಳಿಕ ಬಂದ ಜಸ್ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾದರೆ, ಅಕ್ಷರ್ ಪಟೇಲ್ (44) ಕೊನೆಯ ವಿಕೆಟ್ ರೂಪದಲ್ಲಿ ಬೌಲ್ಡ್ ಆದರು. ಇದರೊಂದಿಗೆ ಟೀಮ್ ಇಂಡಿಯಾ 436 ರನ್ಗಳಿಗೆ ಸರ್ವಪತನ ಕಂಡಿತು.
ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 246 ರನ್ಗಳಿಗೆ ಆಲೌಟ್ ಆಗಿದ್ದರೆ, ಟೀಮ್ ಇಂಡಿಯಾ 436 ರನ್ ಬಾರಿಸಿದೆ. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 190 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ಟೀಮ್ ಇಂಡಿಯಾ ಮೇಲುಗೈ ಹೊಂದಿದ್ದು, ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ ಅಥವಾ ಗೆಲ್ಲಬೇಕಿದ್ದರೆ ಇಂಗ್ಲೆಂಡ್ ಇನ್ನೆರಡು ದಿನಗಳ ಕಾಲ ಆಲೌಟ್ ಆಗದೇ ಉಳಿಯಬೇಕಿದೆ. ಹೀಗಾಗಿ ಮೊದಲ ಪಂದ್ಯವನ್ನು ಗೆಲ್ಲಲು ಭಾರತ ತಂಡಕ್ಕೆ ಅತ್ಯುತ್ತಮ ಅವಕಾಶವಿದೆ ಎನ್ನಬಹುದು.
ಇದನ್ನೂ ಓದಿ: Joe Root: ರೂಟ್ ಕ್ಲಿಯರ್…ಸಚಿನ್ ತೆಂಡೂಲ್ಕರ್ ದಾಖಲೆ ಉಡೀಸ್..!
Published On - 10:26 am, Sat, 27 January 24