IND vs ENG: ಆಂಗ್ಲರಿಗೆ ಹ್ಯಾಟ್ರಿಕ್ ಸೋಲು: ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ
India vs England, 4th Test: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಮ್ಯಾಚ್ನಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯಲ್ಲಿ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಕೊನೆಯ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ.
ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ (Team India) ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿತು.
- ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ಪರ ಜೋ ರೂಟ್ (122) ಅಜೇಯ ಶತಕ ಬಾರಿಸಿದ್ದರು. ಈ ಸೆಂಚುರಿ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 353 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಮೊದಲ ಇನಿಂಗ್ಸ್ನಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.
- ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಪರ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ಹೊರತಾಗಿಯೂ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 307 ರನ್ಗಳಿಗೆ ಆಲೌಟ್ ಆಗಿ 46 ರನ್ಗಳ ಹಿನ್ನಡೆ ಅನುಭವಿಸಿದೆ. ಈ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ಪರ ಶೊಯೆಬ್ ಬಶೀರ್ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
- 46 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಅವರ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ ಇಂಗ್ಲೆಂಡ್ ಕೇವಲ 145 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಕುಲ್ದೀಪ್ 4 ವಿಕೆಟ್ ಪಡೆದರು.
- ಮೊದಲ ಇನಿಂಗ್ಸ್ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 192 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 84 ರನ್ ಪೇರಿಸಿದರು. ಯಶಸ್ವಿ ಜೈಸ್ವಾಲ್ (37) ಹಾಗೂ ರೋಹಿತ್ ಶರ್ಮಾ (55) ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು.
- 120 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಶುಭ್ಮನ್ ಗಿಲ್ ಹಾಗೂ ಧ್ರುವ್ ಜುರೇಲ್ ಆಸರೆಯಾದರು. 6ನೇ ವಿಕೆಟ್ಗೆ 72 ರನ್ಗಳ ಜೊತೆಯಾಟವಾಡುವ ಮೂಲಕ ಗಿಲ್ (52) – ಧ್ರುವ್ (39) ಜೋಡಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.
ಹ್ಯಾಟ್ರಿಕ್ ಸೋಲು:
ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್ಗಳ ಜಯ ಸಾಧಿಸಿತ್ತು. ಇನ್ನು 2ನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 106 ರನ್ಗಳ ಭರ್ಜರಿ ಜಯ ದಾಖಲಿಸಿತು. ಹಾಗೆಯೇ 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್ಗಳಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿತ್ತು. ಇದೀಗ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ ಹ್ಯಾಟ್ರಿಕ್ ಸೋಲುಣಿಸಿದೆ.
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಇದನ್ನೂ ಓದಿ: Joe Root: ಟಾಪ್-5 ಗೆ ಜೋ ರೂಟ್ ಎಂಟ್ರಿ
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಒಲೀ ರಾಬಿನ್ಸನ್, ಜೇಮ್ಸ್ ಅ್ಯಂಡರ್ಸನ್, ಶೊಯೆಬ್ ಬಶೀರ್.
Published On - 1:39 pm, Mon, 26 February 24