ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಆದರೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರದಿಂದ ಭಾರತ ತಂಡ, ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡಿತು. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂದಿನ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ ಪುಣೆಯಲ್ಲಿ ನಡೆಯಲಿದ್ದು, ಕಿವೀ ತಂಡದ ವಿರುದ್ಧ ಪ್ರತಿದಾಳಿಗೆ ರೋಹಿತ್ ಪಡೆ ಸಿದ್ಧತೆ ನಡೆಸುತ್ತಿದೆ. ಆದರೆ ಅದಕ್ಕೂ ಮುನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಯಾರಿಗೆ ಹೆಚ್ಚು ಸಹಕಾರಿ? ಈ ಮೈದಾನದಲ್ಲಿ ಭಾರತ ಎಷ್ಟು ಪಂದ್ಯಗಳನ್ನಾಡಿದೆ. ಅದರಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬಿತ್ಯಾದಿ ವಿವರಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.
ಮೇಲೆ ಹೇಳಿದಂತೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯ ವಹಿಸಲು ಸಿದ್ಧವಾಗಿದೆ. ಈ ಕ್ರೀಡಾಂಗಣದಲ್ಲಿ ಇದುವರೆಗೆ ಕೇವಲ ಎರಡು ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ. ಅಂದರೆ ಈ ಮೈದಾನದಲ್ಲಿ ಟಾಸ್ ಗೆಲ್ಲುವುದು ಬಹಳ ಮುಖ್ಯ. ಇಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 430 ರನ್ ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 190 ರನ್ ಆಗಿದೆ. ಹಾಗೆಯೇ ಮೂರನೇ ಇನ್ನಿಂಗ್ಸ್‌ನಲ್ಲಿ 237 ರನ್ ಮತ್ತು ನಾಲ್ಕನೇ ಇನ್ನಿಂಗ್ಸ್‌ನಲ್ಲಿ 107 ರನ್ ಕಲೆಹಾಕಲಾಗಿದೆ.
ಈ ಮೈದಾನದಲ್ಲಿ ಭಾರತದ ದಾಖಲೆ ಅದ್ಭುತವಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್ ಕಳೆದುಕೊಂಡು ತಂಡ 601 ರನ್ ಕಲೆಹಾಕಿತ್ತು. ಅಲ್ಲದೆ ಇದೇ ಮೈದಾನದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಕೇವಲ 105 ರನ್ಗಳಿಗೆ ಆಲೌಟ್ ಆಗಿತ್ತು. ಇದನ್ನು ಗಮನಿಸಿದರೆ ಪುಣೆ ಪಿಚ್ನಲ್ಲಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ರನ್ ಗಳಿಸುವುದು ಅತ್ಯಂತ ಕಷ್ಟಕರವಾಗಿದ್ದು, ಈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಇನ್ನು ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳನ್ನಾಡಿದ್ದು, ಇದರಲ್ಲಿ 1 ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಇನ್ನೊಂದು ಪಂದ್ಯದಲ್ಲಿ ಸೋಲು ಕಂಡಿದೆ. 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 333 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿದ್ದ ಭಾರತ, 2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಗೆಲುವು ಸಾಧಿಸಿತ್ತು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್.
ನ್ಯೂಜಿಲೆಂಡ್ ತಂಡ: ಟಾಮ್ ಲೇಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಝ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ಜೇಕೊಬ್ ಡಫಿ, ವಿಲ್ ಯಂಗ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:35 pm, Mon, 21 October 24