ಭಾರತ-ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯಕ್ಕೆ 9 ಬದಲಾವಣೆ; ಆಡುವ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ?

ಭಾರತ-ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯ ಬೇ ಓವಲ್‌ನಲ್ಲಿ ನಡೆಯುತ್ತಿದೆ. ಟೆಸ್ಟ್ ಸಿದ್ಧತೆಗಾಗಿ ಎರಡೂ ತಂಡಗಳಲ್ಲಿ ಒಟ್ಟು 9 ಬದಲಾವಣೆಗಳನ್ನು ಮಾಡಲಾಗಿದೆ. 2-0 ಮುನ್ನಡೆಯೊಂದಿಗೆ ಸರಣಿ ಗೆಲ್ಲಲು ಭಾರತ ಸಿದ್ಧವಾಗಿದ್ದರೆ, ತವರಿನಲ್ಲಿ ಸರಣಿ ಸೋಲು ತಪ್ಪಿಸಲು ನ್ಯೂಜಿಲೆಂಡ್ ಒತ್ತಡದಲ್ಲಿದೆ. ಭಾರತದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರುತುರಾಜ್, ಇಶಾನ್, ಕುಲದೀಪ್ ಭಾರತ ತಂಡಕ್ಕೆ ಮರಳಿದ್ದಾರೆ.

ಭಾರತ-ನ್ಯೂಜಿಲೆಂಡ್ 4ನೇ ಏಕದಿನ ಪಂದ್ಯಕ್ಕೆ 9 ಬದಲಾವಣೆ; ಆಡುವ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ?
ಭಾರತVs ನ್ಯೂಜಿಲೆಂಡ್

Updated on: Nov 13, 2026 | 7:59 AM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ಈಗಾಗಲೇ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ 2-0 ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ತವರಿನಲ್ಲೇ ಸರಣಿ ಸೋಲಿನ ಭೀತಿಯಲ್ಲಿರುವ ನ್ಯೂಜಿಲೆಂಡ್ ತಂಡಕ್ಕೆ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಒತ್ತಡವಿದೆ. ಇನ್ನು ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್‌ ಹೊರಬಿದ್ದಿದ್ದು, ಕೆಲವು ಬದಲಾವಣೆಗಳಾಗಿವೆ.

ಮುಂಬರುವ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಎರಡೂ ತಂಡಗಳ ಹಲವು ಆಟಗಾರರು ಏಕದಿನ ತಂಡದಿಂದ ಹೊರಬಂದು ಟೆಸ್ಟ್ ಶಿಬಿರ ಸೇರಿಕೊಂಡಿದ್ದಾರೆ. ಹೀಗಾಗಿ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಒಟ್ಟಾಗಿ ತಮ್ಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬರೋಬ್ಬರಿ 9 ಬದಲಾವಣೆಗಳನ್ನು ಮಾಡಿಕೊಂಡಿವೆ.

Loading...

ಭಾರತ ತಂಡದಲ್ಲಿ 3 ಬದಲಾವಣೆ

ನಾಲ್ಕನೇ ಏಕದಿನ ಪಂದ್ಯಕ್ಕಾಗಿ ಭಾರತ ತಂಡದ ಆಡಳಿತ ಮಂಡಳಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ ಮತ್ತು ಕುಲ್ದೀಪ್ ಯಾದವ್ ಈ ಸರಣಿಯಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದಾರೆ. ನಾಯಕ ಹಾಗೂ ಆರಂಭಿಕ ಬ್ಯಾಟರ್ ಶುಭ್​ಮನ್ ಗಿಲ್ ಬದಲಿಗೆ ರುತುರಾಜ್ ಗಾಯಕ್ವಾಡ್‌ಗೆ ಅವಕಾಶ ನೀಡಲಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಬದಲಿಗೆ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಮತ್ತೆ ತಂಡಕ್ಕೆ ಮರಳಿದ್ದಾರೆ.

ನ್ಯೂಜಿಲೆಂಡ್ ತಂಡದಲ್ಲಿ 6 ಬದಲಾವಣೆ

ಇತ್ತ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ನ್ಯೂಜಿಲೆಂಡ್ ತಂಡ ಕೂಡ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬರೋಬ್ಬರಿ ಆರು ಬದಲಾವಣೆಗಳನ್ನು ಮಾಡಿಕೊಂಡಿದೆ. ಬ್ಯಾಟಿಂಗ್ ಕ್ರಮದಲ್ಲಿ ನಿಕ್ ಕೆಲ್ಲಿ ಅವರನ್ನು ಮೂರನೇ ಕ್ರಮಾಂಕದಲ್ಲಿ ಹಾಗೂ ಡೀನ್ ಫಾಕ್ಸ್‌ಕ್ರಾಫ್ಟ್ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಸ್ಫೋಟಕ ಬ್ಯಾಟರ್ ಫಿನ್ ಅಲೆನ್, ಅನುಭವಿ ವೇಗದ ಬೌಲರ್ ಮ್ಯಾಟ್ ಹೆನ್ರಿ, ಮೈಕಲ್ ಬ್ರೇಸ್‌ವೆಲ್ ಮತ್ತು ಕ್ರಿಸ್ಟಿಯನ್ ಕ್ಲಾರ್ಕ್ ಸೇರಿದಂತೆ ಒಟ್ಟು ಆರು ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ ತಂಡ: ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಆಕಿಬ್ ನಬಿ, ಕುಲ್ದೀಪ್ ಯಾದವ್, ಗುರ್‌ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ವಿಲ್ ಯಂಗ್, ನಿಕ್ ಕೆಲ್ಲಿ, ಡೀನ್ ಫಾಕ್ಸ್‌ಕ್ರಾಫ್ಟ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಮ್ಯಾಥ್ಯೂ ಫಿಶರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 am, Fri, 13 November 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us