ಏಷ್ಯಾಕಪ್ (Asia Cup 2023) ಸೂಪರ್-4 ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನಕ್ಕೆ ಕೊಲಂಬೊದ ಆರ್. ಪ್ರೇಮದಾಸ ಮೈದಾನ ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ಈ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯಲಿದ್ದು, ಇದಕ್ಕಾಗಿ ಎರಡೂ ತಂಡಗಳು ಕೊಲಂಬೊ ತಲುಪಿವೆ. ಆದರೆ ಪಂದ್ಯದ ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಕೂಡ ಈ ಪಂದ್ಯಕ್ಕೆ ಮೀಸಲು ದಿನವನ್ನು ಇಟ್ಟುಕೊಂಡಿದ್ದು, ಸೆಪ್ಟೆಂಬರ್ 10 ರಂದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಮರುದಿನ ಅಂದರೆ ಸೆಪ್ಟೆಂಬರ್ 11 ರಂದು ಪಂದ್ಯವನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
ಏಷ್ಯಾಕಪ್‌ನ ಲೀಗ್ ಸುತ್ತಿನಲ್ಲೂ ಭಾರತ-ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆದರೆ ಆ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಪಾಕ್ ವೇಗಿಗಳ ದಾಳಿಗೆ ಸಿಲುಕಿ ಆರಂಭದಲ್ಲೇ ಹಿನ್ನಡೆ ಅನುಭವಿಸಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಪಾಕಿಸ್ತಾನಕ್ಕೆ ಸ್ಪರ್ಧಾತ್ಮಕ ಸವಾಲು ನೀಡಿತ್ತು. ಆದರೆ ಪಾಕಿಸ್ತಾನದ ಬ್ಯಾಟಿಂಗ್ ಆರಂಭವಾಗುವ ಮುನ್ನವೇ ಭಾರೀ ಮಳೆ ಸುರಿದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಪಲ್ಲೆಕೆಲೆಯಲ್ಲಿ ನಡೆದ ಈ ಪಂದ್ಯ ರದ್ದಾದ ಕಾರಣ ಅಭಿಮಾನಿಗಳಲ್ಲಿ ನಿರಾಸೆ ಮೂಡಿತ್ತು. ಹೀಗಾಗಿ ಕೊಲಂಬೊದಲ್ಲಿ ಅಭಿಮಾನಿಗಳಿಗೆ ರಸದೌತಣ ನೀಡುವ ಸಲುವಾಗಿ ಎಸಿಸಿ ಮೀಸಲು ದಿನವನ್ನು ಕಾಯ್ದಿರಿಸಿದೆ.
ಭಾರತ- ಪಾಕ್ ಪಂದ್ಯಕ್ಕೆ ಮಾತ್ರ ಮೀಸಲು ದಿನ; ಬಾಂಗ್ಲಾ- ಲಂಕಾ ಮಂಡಳಿಗಳು ಹೇಳಿದ್ದೇನು?
ಏಷ್ಯಾಕಪ್ ಸೂಪರ್ ಫೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಾಳೆ ಭಾನುವಾರ (ಸೆಪ್ಟೆಂಬರ್ 10) ನಡೆಯಲಿದೆ.
ಕೊಲಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ ಫೋರ್ ಪಂದ್ಯ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲ್ಲಿದ್ದು, 2.30ಕ್ಕೆ ಪಂದ್ಯದ ಟಾಸ್ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ (ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ ಎಚ್‌ಡಿ) ಲಭ್ಯವಿರುತ್ತದೆ. ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಉಚಿತವಾಗಿ ನೋಡಬಹುದಾಗಿದೆ.
ಭಾರತ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ: ಬಾಬರ್ ಆಝಂ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:05 pm, Sat, 9 September 23