
ಧರ್ಮಶಾಲಾದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡ, ದಕ್ಷಿಣ ಆಫ್ರಿಕಾವನ್ನು (India vs South Africa) ಏಳು ವಿಕೆಟ್‌ಗಳಿಂದ ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಭಾರತದ ಬೌಲಿಂಗ್ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು. ನಂತರ ಈ ಗುರಿ ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 120 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಅಭಿಷೇಕ್ ಶರ್ಮಾ (Abhishek Sharma) 18 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿದಂತೆ 35 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾದ ಮೊದಲ ಓವರ್‌ನಿಂದಲೇ ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ಇದರ ಪರಿಣಾಮವಾಗಿ ಆಫ್ರಿಕಾ ತಂಡ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಬಳಿಕವೂ ಆಫ್ರಿಕಾ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ಐಡೆನ್ ಮಾರ್ಕ್ರಾಮ್ ಅರ್ಧಶತಕ ಗಳಿಸಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು.
ಮಾರ್ಕ್ರಾಮ್ 46 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 61 ರನ್ ಗಳಿಸಿದರೆ, ಡೊನೊವನ್ ಫೆರೇರಾ 20 ರನ್‌ಗಳ ಕೊಡುಗೆ ನೀಡಿದರು. ಅನ್ರಿಚ್ ನೋಕಿಯಾ 12 ರನ್‌ಗಳಿಗೆ ಔಟಾದರು. ಈ ಮೂವರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ, ದಕ್ಷಿಣ ಆಫ್ರಿಕಾದ ಯಾವುದೇ ಇತರ ಬ್ಯಾಟ್ಸ್‌ಮನ್ ಎರಡಂಕಿಯನ್ನು ತಲುಪಲಿಲ್ಲ. ಕುತೂಹಲಕಾರಿಯಾಗಿ, ಈ ಪಂದ್ಯದಲ್ಲಿ ಭಾರತದ ಎಲ್ಲಾ ಬೌಲರ್‌ಗಳು ವಿಕೆಟ್ ಪಡೆದರು. ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.
ಈ ಗುರಿ ಬೆನ್ನಟ್ಟಿದ ಭಾರತದ ಪರ ಅಭಿಷೇಕ್ ಮತ್ತು ಶುಭ್‌ಮನ್ ಗಿಲ್ ಸ್ಫೋಟಕ ಆರಂಭ ನೀಡಿದರು. ಇಬ್ಬರು ಬ್ಯಾಟ್ಸ್‌ಮನ್‌ಗಳು ಮೊದಲ ವಿಕೆಟ್‌ಗೆ 60 ರನ್‌ಗಳ ಜೊತೆಯಾಟ ನೀಡಿದರು. ಆದರೆ ಕಾರ್ಬಿನ್ ಬಾಷ್ ಬೌಲಿಂಗ್‌ನಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ 35 ರನ್ ಬಾರಿಸಿ ಅಭಿಷೇಕ್ ಔಟಾದರು. ಆ ಬಳಿಕ ಮೂರನೇ ಕ್ರಮಾಂಕದಲ್ಲಿ ಬಂದ ತಿಲಕ್ ಮತ್ತು ಗಿಲ್ ಎರಡನೇ ವಿಕೆಟ್‌ಗೆ 32 ರನ್ ಸೇರಿಸಿದರು. ಆದರೆ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಶುಭ್‌ಮನ್ ಗಿಲ್ ಈ ಪಂದ್ಯದಲ್ಲಿ 28 ರನ್ ಬಾರಿಸಿದರಾದರೂ ಇದಕ್ಕೆ ಬರೋಬ್ಬರಿ 28 ಎಸೆತಗಳನ್ನು ತೆಗೆದುಕೊಂಡರು.
IND vs SA: ಧರ್ಮಶಾಲಾದಲ್ಲಿ ತನ್ನ ವೃತ್ತಿಜೀವನದ ಐತಿಹಾಸಿಕ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ
ನಾಯಕ ಸೂರ್ಯಕುಮಾರ್ ಯಾದವ್ ಕೂಡ ಕೇವಲ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ನಂತರ ಜೊತೆಯಾದ ತಿಲಕ್ ಮತ್ತು ಶಿವಂ ದುಬೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ತಿಲಕ್ 34 ಎಸೆತಗಳಲ್ಲಿ ಮೂರು ಬೌಂಡರಿಗಳೊಂದಿಗೆ 25 ರನ್ ಗಳಿಸಿ ಅಜೇಯರಾಗಿ ಉಳಿದರೆ, ಶಿವಂ ನಾಲ್ಕು ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 10 ರನ್ ಗಳಿಸಿ ಅಜೇಯರಾಗಿ ಉಳಿದರು. ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ, ಮಾರ್ಕೊ ಯಾನ್ಸೆನ್ ಮತ್ತು ಕಾರ್ಬಿನ್ ಬಾಷ್ ತಲಾ ಒಂದು ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:28 pm, Sun, 14 December 25