
ಸೌತ್ ಆಫ್ರಿಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕೆಎಲ್ಆರ್ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ದೇಶಗಳ ವಿರುದ್ಧ ಅರ್ಧಶತಕ ಬಾರಿಸಿದ ವಿಶೇಷ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 10 ವಿವಿಧ ದೇಶಗಳ ವಿರುದ್ಧ ಅರ್ಧಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ 11 ದೇಶಗಳ ವಿರುದ್ದ ಹಾಫ್ ಸೆಂಚುರಿ ಬಾರಿಸಿ ಮೊದಲ ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಎಂಬ ದಾಖಲೆ ರಾಹುಲ್ ಪಾಲಾಗಿದೆ.

ಕೆಎಲ್ ರಾಹುಲ್ ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಮತ್ತು ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ ವಿರುದ್ಧ ತಲಾ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಬಾಂಗ್ಲಾದೇಶ, ಇಂಗ್ಲೆಂಡ್, ಐರ್ಲೆಂಡ್, ನಮೀಬಿಯಾ, ಸ್ಕಾಟ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಲಾ ಒಂದು ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 11 ದೇಶಗಳ ವಿರುದ್ಧ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

ಸದ್ಯ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ ಕೆಎಲ್ ರಾಹುಲ್ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 3694 ರನ್ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 3663 ರನ್ ಗಳಿಸಿ 2ನೇ ಸ್ಥಾನದಲ್ಲಿದ್ದಾರೆ.

ಇನ್ನು 2080 ರನ್ ಕಲೆಹಾಕಿರುವ ಕೆಎಲ್ ರಾಹುಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.