ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ 3 ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಇಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯುತ್ತಿದೆ. ಮುಂದಿನ ತಿಂಗಳಿನಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ (T20 World Cup) ಆರಂಭವಾಗಲಿd್ದು, ಅದಕ್ಕೂ ಮುನ್ನ ಈ ಸರಣಿಯು ತಯಾರಿಯ ದೃಷ್ಟಿಯಿಂದ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿ ಕಳೆದ ವಾರ ಕೊನೆಗೊಂಡಿತ್ತು. ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಜಯ ಸಾಧಿಸಿತ್ತು. ಉಭಯ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಇಲ್ಲದೆ ಕಣಕ್ಕಿಳಿದಿದ್ದು, ಯುಜುವೇಂದ್ರ ಚಹಲ್‌ಗೂ ವಿಶ್ರಾಂತಿ ನೀಡಲಾಗಿದೆ.
ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮತ್ತು ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ಸರಣಿಗಾಗಿ ವಿಶ್ರಾಂತಿ ಪಡೆದಿದ್ದ ಅರ್ಶ್ದೀಪ್ ಸಿಂಗ್ ತಂಡಕ್ಕೆ ಮರಳಿದ್ದಾರೆ. ಗಾಯ ಮತ್ತು ಫಿಟ್ನೆಸ್ ಸಮಸ್ಯೆಯಿಂದ ಚೇತರಿಸಿಕೊಂಡಿರುವ ಉಮೇಶ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಶಹಬಾಜ್ ಅಹ್ಮದ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಈ ಪಂದ್ಯದ ಆಡುವ XI ನಲ್ಲಿ ಟೀಂ ಇಂಡಿಯಾ ಮೂರು ಬದಲಾವಣೆಗಳನ್ನು ಮಾಡಿದೆ. ಹಾರ್ದಿಕ್‌ಗೆ ವಿಶ್ರಾಂತಿ ನೀಡಿದ್ದರಿಂದ ರಿಷಬ್ ಪಂತ್ ಆಡುವ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಅದೇ ವೇಳೆ ಬುಮ್ರಾ ರೂಪದಲ್ಲಿ ತಂಡಕ್ಕೆ ಹಿನ್ನಡೆಯಾಗಿದೆ. ಬುಧವಾರ ಬೆಳಿಗ್ಗೆ ಸ್ವಲ್ಪ ಅಸ್ವಸ್ಥತೆಯಿಂದ ಬಳಲುತ್ತಿದ್ದರಿಂದ ಬುಮ್ರಾಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದು ಟಾಸ್ ವೇಳೆ ನಾಯಕ ರೋಹಿತ್ ಹೇಳಿದ್ದಾರೆ. ಈ ಕಾರಣದಿಂದಾಗಿ ದೀಪಕ್ ಚಹಾರ್ ಅವರಿಗೆ ಬುಮ್ರಾ ಬದಲು ತಂಡದಲ್ಲಿ ಸ್ಥಾನ ನೀಡಲಾಗಿದೆ. ಮತ್ತೊಂದೆಡೆ, ಭುವನೇಶ್ವರ್ ಬದಲಿಗೆ ಅರ್ಷದೀಪ್ ಸಿಂಗ್‌ಗೆ ಅವಕಾಶ ನೀಡಲಾಗಿದೆ. ರವಿಚಂದ್ರನ್ ಅಶ್ವಿನ್ ಕೂಡ ತಂಡಕ್ಕೆ ಮರಳಿದ್ದಾರೆ.
ಉಭಯ ತಂಡಗಳು ಹೀಗಿವೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಹರ್ಷಲ್ ಪಟೇಲ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಿಲೆ ರುಸ್ಸೋ, ಡೇವಿಡ್ ಮಿಲ್ಲರ್, ಏಡನ್ ಮಾರ್ಕ್ರಾಮ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪೆರ್ನೆಲ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ, ತಬರಿಜ್ ಶಮ್ಸಿ, ಕೇಶವ್ ಮಹಾರಾಜ್
Published On - 6:41 pm, Wed, 28 September 22