
India vs Sri Lanka 1st Odi: ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 143 ರನ್ಗಳ ಜೊತೆಯಾಟವಾಡಿದ ಶುಭ್ಮನ್ ಗಿಲ್ 70 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ 67 ಎಸೆತಗಳಲ್ಲಿ 83 ರನ್ ಬಾರಿಸಿದ್ದ ರೋಹಿತ್ ಶರ್ಮಾ ಕೂಡ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು. ಇನ್ನು 81 ರನ್ಗಳಿಸಿದ್ದ ವೇಳೆ ದುಸನ್ ಶಾನಕ ಕೂಡ ಕ್ಯಾಚ್ ಕೈಬಿಟ್ಟರು. ಇದಾದ ಬಳಿಕ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಕಿಂಗ್ ಕೊಹ್ಲಿ ಶತಕದತ್ತ ಮುನ್ನುಗ್ಗಿದರು.
ಅದರಂತೆ 80 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಕಿಂಗ್ ಕೊಹ್ಲಿಯ 45ನೇ ಏಕದಿನ ಶತಕವಾಗಿದೆ. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 45 ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕರ್ 45+ ಶತಕ ಬಾರಿಸಿದ್ದರು. ಇದೀಗ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈ ಭರ್ಜರಿ ಶತಕದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 373 ರನ್ ಕಲೆಹಾಕಿತು.
374 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಶ್ರೀಲಂಕಾ ಉತ್ತಮ ಆರಂಭ ಪಡೆದಿರಲಿಲ್ಲ. ಅವಿಷ್ಕಾ ಫರ್ನಾಂಡೊ (5) ರನ್ನು ಬೇಗನೆ ಔಟ್ ಮಾಡುವ ಮೂಲಕ ಸಿರಾಜ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಕುಸಾಲ್ ಮೆಂಡಿಸ್ರನ್ನು ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು. ಆ ಬಳಿಕ ಬಂದ ಚರಿತ್ ಅಸಲಂಕಾ 23 ರನ್ಗಳಿಸಿ ಉಮ್ರಾನ್ ಮಲಿಕ್ಗೆ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಜೊತೆಯಾದ ಪಾತುಮ್ ನಿಸ್ಸಂಕಾ ಹಾಗೂ ಧನಂಜಯ ಡಿಸಿಲ್ವಾ ಅರ್ಧಶತಕಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ಮೊಹಮ್ಮದ್ ಶಮಿ ಧನಂಜಯ (47) ವಿಕೆಟ್ ಕಬಳಿಸಿದರು. ಇದರ ಬೆನ್ನಲ್ಲೇ ಪಾತುಮ್ ನಿಸ್ಸಂಕಾ (72) ವಿಕೆಟ್ ಪಡೆದ ಉಮ್ರಾನ್ ಟೀಮ್ ಇಂಡಿಯಾಗೆ 5ನೇ ಯಶಸ್ಸು ತಂದುಕೊಟ್ಟರು. ಇನ್ನು ವನಿಂದು ಹಸರಂಗ (16) ರನ್ನು ಚಹಾಲ್ ಔಟ್ ಮಾಡಿದರೆ, ದುನಿತ್ (0) ರನ್ನು ಉಮ್ರಾನ್ ಕ್ಲೀನ್ ಬೌಲ್ಡ್ ಮಾಡಿದರು. ಇದಾಗ್ಯೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ದಸುನ್ ಶಾನಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಅಷ್ಟೇ ಅಲ್ಲದೆ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಹಾಫ್ ಸೆಂಚುರಿ ಬಳಿಕ 9ನೇ ವಿಕೆಟ್ಗೆ ಕಸುನ್ ರಜಿತ ಜೊತೆ ಇನಿಂಗ್ಸ್ ಕಟ್ಟಿದ ಶಾನಕ 88 ರನ್ಗಳ ಜೊತೆಯಾಟವಾಡಿದರು. ಅಲ್ಲದೆ 87 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ದಸುನ್ ಶಾನಕ (108*) ಬ್ಯಾಟ್ ಮೇಲೆತ್ತಿದರು. ಅಂತಿಮವಾಗಿ ಶ್ರೀಲಂಕಾ ತಂಡವು 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 306 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 67 ರನ್ಗಳ ಜಯ ಸಾಧಿಸಿತು. ಟೀಮ್ ಇಂಡಿಯಾ ಪರ ಉಮ್ರಾನ್ ಮಲಿಕ್ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದು ಮಿಂಚಿದರು.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಅವಿಷ್ಕ ಫೆರ್ನಾಂಡೊ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ
Published On - 9:22 pm, Tue, 10 January 23