ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2025ರ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ನೀಡಿದ 133 ರನ್‌ಗಳ ಸವಾಲನ್ನು ಟೀಂ ಇಂಡಿಯಾ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಟೀಂ ಇಂಡಿಯಾದ ಗೆಲುವಿನ ಹೀರೋ ಎನಿಸಿಕೊಂಡ ಅಭಿಷೇಕ್ 79 ರನ್ ಗಳ ಬಿರುಸಿನ ಇನಿಂಗ್ಸ್ ಆಡಿದರು. ಇದಲ್ಲದೆ ಈ ಪಂದ್ಯದಲ್ಲಿ 250ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಅರ್ಧಶತಕ ಸಿಡಿಸಿದ ಅಭಿಷೇಕ್ ಶರ್ಮಾ, ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ತನ್ನ ಗುರು ಯುವರಾಜ್ ಸಿಂಗ್ ಅವರ ದಾಖಲೆನ್ನು ಸರಿಗಟ್ಟಿದರು.
ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 255 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ 3 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ ತಮ್ಮ ಅರ್ಧಶತಕ ಪೂರೈಸಿದರು. ಇದು ಭಾರತದಲ್ಲಿ ಭಾರತೀಯ ಆಟಗಾರನೊಬ್ಬ ಸಿಡಿಸಿದ ಮೂರನೇ ವೇಗದ ಅರ್ಧಶತಕವಾಗಿದೆ. ಇದರ ಜೊತೆಗೆ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಅಭಿ, ತನ್ನ ಕ್ರಿಕೆಟ್ ಗುರು ಯುವರಾಜ್ ಸಿಂಗ್ ಅವರ ದಾಖಲೆನ್ನು ಸಹ ಸರಿಗಟ್ಟಿದ್ದಾರೆ. ವಾಸ್ತವವಾಗಿ 2009ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ ಒಟ್ಟು 79 ರನ್ ಗಳಿಸಿದರು. ಈ ವೇಳೆ ಅವರು 232.35 ಸ್ಟ್ರೈಕ್ ರೇಟ್‌ನಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದರು. ಇದರೊಂದಿಗೆ ಅಭಿಷೇಕ್ ಶರ್ಮಾ, 18 ವರ್ಷಗಳ ಹಿಂದೆ ಯುವರಾಜ್ ಸಿಂಗ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ, ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 8 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 7 ಸಿಕ್ಸರ್ ಬಾರಿಸಿದ್ದರು. ಈ ಪಂದ್ಯದಲ್ಲಿ ಯುವರಾಜ್ 6 ಎಸೆತಗಳಲ್ಲಿ ಸತತ 6 ಸಿಕ್ಸರ್ ಸಿಡಿಸಿದ್ದು, ವಿಶ್ವ ದಾಖಲೆಯಾಗಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ